*ಪಡಿತರ ಚೀಟಿದಾರರಿಗೆ ಗುಡ್ನ್ಯೂಸ್*: *ಮನೆಯಲ್ಲೇ ಕುಳಿತು ಇ-ಕೆವೈಸಿ ಮಾಡಲು ಅವಕಾಶ*

ಪ್ರಗತಿವಾಹಿನಿ ಸುದ್ದಿ: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅಗತ್ಯವಿಲ್ಲ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ‘ಅನ್ನಸೇವೆ’ ಮೊಬೈಲ್ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಇ-ಕೆವೈಸಿ ಪೂರ್ಣಗೊಳಿಸುವ ಸೌಲಭ್ಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿದೆ. ಇನ್ನು ಈ ಪ್ರಕ್ರಿಯೆ ಪೂರ್ಣಗೊಳಿಸಲು ಅಕ್ಟೋಬರ್ 20, 2026ರವರೆಗೆ ಗಡುವು ನೀಡಲಾಗಿದೆ.
ಈ ಮೊದಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಸೌಲಭ್ಯ ಒದಗಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸೇವೆ ವಿಸ್ತರಣೆಯಾಗಿದ್ದು, ಪಡಿತರ ಚೀಟಿದಾರರು ಮನೆಯಲ್ಲೇ ಕುಳಿತು ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗುವ ಜನದಟ್ಟಣೆ, ಸರ್ವರ್ ಸಮಸ್ಯೆ ಹಾಗೂ ಬಯೋಮೆಟ್ರಿಕ್ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಈ ಡಿಜಿಟಲ್ ವ್ಯವಸ್ಥೆ ಸಹಕಾರಿಯಾಗಲಿದೆ. ಮುಖ ಗುರುತಿಸುವ ತಂತ್ರಜ್ಞಾನ ಬಳಸಿಕೊಂಡು ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಇದಕ್ಕಾಗಿ ಫಲಾನುಭವಿಗಳು ತಮ್ಮ ಮೊಬೈಲ್ನ ಗೂಗಲ್ ಪ್ಲೇ ಸ್ಟೋರ್ನಿಂದ ‘ಅನ್ನಸೇವೆ’, ‘ಸಿಇಜಿ ಫೇಸ್ ಕೆವೈಸಿ’ ಮತ್ತು ‘ಆಧಾರ್ ಫೇಸ್ ಆರ್ಡಿ’ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ ಆ್ಯಪ್ನಲ್ಲಿ ನೀಡಿರುವ ಸೂಚನೆಗಳನ್ನು ಅನುಸರಿಸಿ ಮುಖ ದೃಢೀಕರಣದ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ರಾಜ್ಯದಲ್ಲಿ ಒಟ್ಟು 2,67,64,276 ಪಡಿತರ ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದೆ. ಸೆಪ್ಟೆಂಬರ್ 29ರವರೆಗೆ 1,56,21,608 ಮಂದಿ ಈ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಇನ್ನು ಒಮ್ಮೆಯೂ ಇ-ಕೆವೈಸಿ ಮಾಡಿಸದ 3,82,362 ಸದಸ್ಯರು ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.
ಇ-ಕೆವೈಸಿ ಮಾಡಿಸದವರು ಅಕ್ಟೋಬರ್ 20ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದು ಉತ್ತಮ. ಮೊಬೈಲ್ ಆ್ಯಪ್ ಬಳಸಲು ಸಾಧ್ಯವಾಗದವರು ನ್ಯಾಯಬೆಲೆ ಅಂಗಡಿಗಳು ಅಥವಾ ಆಹಾರ ನಿರೀಕ್ಷಕರ ಮೂಲಕವೂ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




