Belagavi NewsBelgaum NewsKannada NewsKarnataka NewsPolitics

*ರೈತರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಬೆಳಗಾವಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ.ಶಿವಕುಮಾರ್, ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿರಾರು ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರು ನಮ್ಮವರೇ ಆಗಿದ್ದು, ಅವರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರದ ಪ್ರತಿನಿಧಿಗಳನ್ನು ದೆಹಲಿಗೆ ಕಳುಹಿಸಲಾಗಿದ್ದು, ಅಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ಕಬ್ಬು ಮತ್ತು ಸಕ್ಕರೆ ಬೆಲೆ ವಿಚಾರ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದ ಹಲವು ರಾಜ್ಯಗಳಿಗೆ ಸಂಬಂಧಿಸಿದ ಈ ಸಮಸ್ಯೆಯ ಕುರಿತು ಕೇಂದ್ರ ಸರ್ಕಾರವೂ ಸಮಿತಿ ರಚಿಸಿ ಚರ್ಚೆ ನಡೆಸುತ್ತಿದೆ. ಹೀಗಾಗಿ ಕರ್ನಾಟಕವೊಂದೇ ಸ್ವತಂತ್ರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕೂಡ ತಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಕುರಿತು ಸಭೆ ನಡೆಸಲು ಉದ್ದೇಶಿಸಲಾಗಿತ್ತಾದರೂ, ಕೆಲವು ಕಾರಣಗಳಿಂದ ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಕಬ್ಬು ಹಾಗೂ ಸಕ್ಕರೆಯ ಬೆಲೆ ನಿಗದಿ ವಿಚಾರ ಕಳೆದ 10ರಿಂದ 12 ವರ್ಷಗಳಿಂದಲೂ ಸಮಸ್ಯೆಯಾಗಿ ಉಳಿದಿದೆ. ಸಕ್ಕರೆಯ ಬೆಲೆ ಹೆಚ್ಚಿಸುವುದಕ್ಕೂ ಹಲವು ಮಿತಿಗಳಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ರೈತರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದ್ದು, ಹೋರಾಟದ ಕುರಿತು ರೈತರು ತಾಳ್ಮೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button