HealthKarnataka News

*ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ

ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್‍ನಲ್ಲಿ ತೊಡಗಿದರೆ ಶಿಸ್ತು ಕ್ರಮ

ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.

ದುರ್ಬಳಕೆ ತಡೆಗಟ್ಟಲು ಕ್ರಮ
ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ 1 ಗಂಟೆ ತಡವಾಗಿ ಬರುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಈ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸಮರ್ಥನೆ ಮಾಡಿಕೊಂಡರು.

Home add -Advt

ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದರು.

ಇನ್ನು ಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾದ ವೇಳೆ ನಾಲ್ಕು ಬಾರಿ ಬಯೋಮೆಟ್ರಿಕ್‍ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಕಡ್ಡಾಯವಾಗಿ ಹಾಕಲೇಬೇಕು. ಇದರ ಆಧಾರಿತವಾಗಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಡಾ. ಪಾಟೀಲ್‌ ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಡಿಎಚ್‍ಒ, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಕರ್ತವ್ಯ ನಿರ್ವಹಿಸುತ್ತಾರೆ. ನಾವು ಎನ್‍ಎಂಸಿ ಜಾರಿಗೆ ತಂದಿರುವ ಮಾರ್ಗಸೂಚಿಗಳ ಮೂಲಕವೇ ಕಾರ್ಯ ನಿರ್ವಹಿಸುವಂತೆ ಸೂಚನೆ ಕೊಡಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಸರಿಪಡಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

ರೋಗಿಗಳಿಗೆ ಒಪಿಡಿ ವ್ಯವಸ್ಥೆ
ಪ್ರತಿಯೊಂದು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಒಪಿಡಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ಒಪಿಡಿ ನೀಡಬೇಕೆಂದು ಸೂಚನೆ ಕೊಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಸಿಗುತ್ತಿದೆ. ಎಲ್ಲಿಯೂ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಜಿಲ್ಲೆಯ ಮೆಗಾನ್ ಆಸ್ಪತ್ರೆಯಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳನ್ನು ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸುತ್ತೇನೆ. ಶಿವಮೊಗ್ಗಕ್ಕೆ 100 ಹಾಸಿಗೆ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಸದಸ್ಯರು ಮನವಿ ಮಾಡಿದ್ದಾರೆ. ಇದು ಪ್ರಾಥಮಿಕ ಮತ್ತು ಆರೋಗ್ಯ ಕುಟುಂಬ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಸಂಬಂಧಪಟ್ಟವರು ಗಮನ ನೀಡುತ್ತಾರೆಂದು ಸಚಿವ ಡಾ. ಶರಣ್‌ ಪ್ರಕಾಶ್ ಪಾಟೀಲ್ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button