*15 ವರ್ಷದ ಬಾಲಕಿಯನ್ನು ಮದುವೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 15 ವರ್ಷದ ಬಾಲಕಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿವಾಹವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ.
ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತ ಬಾಲ್ಯ ವಿವಾಹ ಆಗಿದ್ದಾನೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಯಮಕನಮರ್ಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೃತ್ಯ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಅಧ್ಯಕ್ಷ ಭೀಮಸಿ ಕಾಲಿಮಣಿ ಅವರು 2023ರ ನವೆಂಬರ್ 5ರಂದು 15 ವರ್ಷದ ಹುಡುಗಿಯನ್ನು ವಿವಾಹವಾಗಿದ್ದಾರೆ ಎಂಬ ಆರೋಪವಿದೆ. ಮಾಹಿತಿಯ ಪ್ರಕಾರ, ಆ ಬಾಲಕಿ ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ ದೂರು ಬಂದ ತಕ್ಷಣ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೆಳಗಾವಿ ಜಿಲ್ಲಾಪಂಚಾಯತ್ ಸಿಇಒ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಎಫ್‌ಐಆರ್ ದಾಖಲಿಸಲು ಹಾಗೂ ಬಾಲಕಿಯನ್ನು ರಕ್ಷಿಸಲು ಸೂಚಿಸಿತ್ತು.
ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಸಿಇಓ, ಡಿಸಿ, ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಅಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪತ್ರ ಬರೆದರೂ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಕ್ಕಿಲ್ಲ ಎನ್ನಲಾಗಿದೆ. ಇಲ್ಲಿ ಆರೋಪಿ ಜಿಲ್ಲೆಯ ಇಬ್ಬರು ಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ಬೀಸೋ ದೊಣ್ಣೆಯಿಂದ ಪಾರಾಗುತ್ತಿದ್ದಾನೆಂದು ಹೇಳಲಾಗುತ್ತಿದೆ.
ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸಿದ್ದಾನೆ. ದೂರು ಬಂದ ತಕ್ಷಣವೇ ಬಸ್ಸಾಪುರಕ್ಕೆ ನಾಲ್ಕು ಸಲ ರಕ್ಷಣಾ ತಂಡ ಹೋದರು ಆತನನ್ನು ಬಂಧನ ಮಾಡಲು ಸಾಧ್ಯವಾಗಿಲ್ಲ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.