ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಗ್ರಾಮ ಪಂಚಾಯಿತಿ ನೌಕರರ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ಎಸ್ ಡಿಎ ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಎಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನಕಾರ್ಯದರ್ಶಿ ಸೂಚಿಸಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ 6 ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆಯಲಿದ್ದಾರೆ. ಈ ರೀತಿ ಬಡ್ತಿಗೆ ಅರ್ಹತೆ ಪಡೆದವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.
ಸಿಬ್ಬಂದಿಯ ಜೇಷ್ಠತಾ ಪಟ್ಟಿ ಸಿದ್ಧಪಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೀಸಲಾತಿ ನಿಯಮ ಅನ್ವಯ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದ ಶೇ.30ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ