ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಅ.2 ರಿಂದ ಒಂದು ತಿಂಗಳ ಕಾಲ ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ಈ ಅಭಿಯಾನದಡಿ ಎಲ್ಲ ಗ್ರಾಪಂಗಳ ವ್ಯಾಪ್ತಿಯ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಮನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ ಬೇಡಿಕೆ ಸ್ವೀಕರಿಸಲಾಗುವುದು. ಅದರಂತೆ ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತರಿ, ಗಂಡು ಹೆಣ್ಣಿಗೆ ಪ್ರತಿ ದಿನಕ್ಕೆ 349 ರೂ. ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಮನರೇಗಾ ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷಚೇತರಿಗೆ ಶೇ.50 ರಷ್ಟು ರಿಯಾಯಿತಿ, ಕಾಮಗಾರಿಯ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲಾಗುವುದು.
ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲ ಸದಸ್ಯರು, ಸಿಬ್ಬಂದಿ, ಕಾಯಕ ಮಿತ್ರರು, ಬಿಎಫ್ ಟಿಗಳು ಒಳಗೊಂಡಂತೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಲಿ, ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಲಿದ್ದಾರೆ.
ಅಂಗನವಾಡಿ, ಗ್ರಂಥಾಲಯ, ನ್ಯಾಯ ಬೆಲೆ ಅಂಗಡಿಗಳು, ಹಾಲಿನ ಕೇಂದ್ರಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅ.31 ರವರೆಗೆ ವೈಯಕ್ತಿಕ ಬೇಡಿಕೆಗಳನ್ನು ಸಲ್ಲಿಸಲು ಪೆಟ್ಟಿಗೆಯನ್ನು ಸ್ಥಾಪಿಸಲಾಗುವುದು. ಜತೆಗೆ ನ.15 ರೊಳಗೆ ವಾರ್ಡ್ ಸಭೆ ನಡೆಸಿ, ಜನರಿಂದ ಕಾಮಗಾರಿ ಬೇಡಿಕೆ ಪೆಟ್ಟಿಗೆ ಮೂಲಕ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ವಾರ್ಡ್ ಸಭೆಗಳಲ್ಲಿ ಕಾಮಗಾರಿಗಳನ್ನು ಅನುಮೋದಿಸಿ, ಗ್ರಾಮ ಸಭೆಗೆ ಸಲ್ಲಿಸಲಾಗುವುದು. ಹಾಗಾಗಿ ಅರ್ಹ ಫಲಾನುಭವಿಗಳು ಕೆಲಸದ ಮತ್ತು ಕಾಮಗಾರಿ ಬೇಡಿಕೆ ಸಲ್ಲಿಸಬಹುದು ಎಂದು ಪ್ರಕಟಣೆ ಮೂಲಕ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ