*ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ: ಸಭೆಯಲ್ಲಿ ಮಹತ್ವದ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವೆಂಬರ್ 1ರಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಮಾದರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯೋತ್ಸವ ದಿನದಂದು ಲಕ್ಷಾಂತರ ಜನರು ನಗರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು, ಸಂಚಾರಿ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು. ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಕನ್ನಡಪರ ಹೋರಾಟಗಾರರು ಹಾಗೂ ಸಾಧಕರನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಇತ್ತೀಚೆಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ ಕಾರ್ಯ ಎಂದು ಜಿಲ್ಲಾಧಿಕಾರಿ ಬಣ್ಣಿಸಿದರು. ಸಂಪೂರ್ಣ ಮಹಾಜನ ವರದಿಯನ್ನು ಅಳವಡಿಸಿಕೊಂಡು ಅಂಗೀಕರಿಸಿರುವ ಈ ಠರಾವು ಮುಂದಿನ ಕಾನೂನು ಹೋರಾಟಕ್ಕೆ ಉಪಯುಕ್ತವಾಗಲಿದೆ ಎಂದು ಹೇಳಿ, ಇದಕ್ಕಾಗಿ ಹೋರಾಟ ನಡೆಸಿದ ಕನ್ನಡಪರ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯೋತ್ಸವ ಮೆರವಣಿಗೆ ಮಾರ್ಗ ಬದಲಾವಣೆ?
ಪ್ರತಿ ವರ್ಷ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಸುಗಮವಾಗಿ ಕುಳಿತು ಮೆರವಣಿಗೆ ವೀಕ್ಷಿಸಲು ಅನುಕೂಲವಾಗುವಂತೆ ಈ ಬಾರಿ ಮೆರವಣಿಗೆಯ ಮಾರ್ಗ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದು ಹಾಗೂ ಉತ್ತಮ ರೂಪಕಗಳಿಗೆ ಪ್ರಶಸ್ತಿ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಹೆಚ್ಚಿನ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಿ, ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಸದಲಗಾದ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ಬಗ್ಗೆಯೂ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸುವರ್ಣ ವಿಧಾನಸೌಧದ ಮುಂದೆ 108 ಅಡಿ ಭುವನೇಶ್ವರಿ ಪ್ರತಿಮೆ
ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಸಾರ್ವಜನಿಕರು ಪೂಜೆ ಸಲ್ಲಿಸಲು ಹೆಚ್ಚಿನ ಸ್ಥಳಾವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸುವರ್ಣ ವಿಧಾನಸೌಧದ ಎದುರು 108 ಅಡಿ ಎತ್ತರದ ಭುವನೇಶ್ವರಿ ದೇವಿಯ ಪ್ರತಿಮೆ ನಿರ್ಮಿಸುವ ಸಂಬಂಧದ ಪ್ರಸ್ತಾವನೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಲ್ಲಿಸುವಂತೆ ತಿಳಿಸಿದರು.
ಕರಾಳ ದಿನಾಚರಣೆಗೆ ಅನುಮತಿ ಇಲ್ಲ
ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡಪರ ಸಂಘಟನೆಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಈ ಬಾರಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ಸ್ಪಷ್ಟಪಡಿಸಿದರು.
ಸಭೆಯಲ್ಲಿ ರಾಜ್ಯೋತ್ಸವದ ವೇದಿಕೆ ಸಿದ್ಧತೆ, ಧ್ವಜಾರೋಹಣ, ಆಮಂತ್ರಣ ಪತ್ರಿಕೆ, ಪಥಸಂಚಲನ, ಸಾಧಕರ ಸನ್ಮಾನ, ಮೆರವಣಿಗೆ, ರೂಪಕ ವಾಹನಗಳಿಗೆ ಅನುಮತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಯಿತು.
ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮಾತನಾಡಿ, ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಜಿಲ್ಲೆಯ ರೂಪಕಗಳನ್ನು ಬೆಳಗಾವಿ ರಾಜ್ಯೋತ್ಸವ ಮೆರವಣಿಗೆಗೆ ತರಬೇಕು, ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು ವ್ಯವಸ್ಥೆ ಮಾಡಬೇಕು, ಮಹಾನಗರ ಪಾಲಿಕೆಯ ನಾಮಫಲಕಗಳಲ್ಲಿ ದ್ವಿಭಾಷಾ ಬಳಕೆ ಮಾಡಬಾರದು, ಸುವರ್ಣ ವಿಧಾನಸೌಧದ ಮುಂದೆ 108 ಅಡಿ ಭುವನೇಶ್ವರಿ ತಾಯಿ ಕಂಚಿನ ಪ್ರತಿಮೆ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಪ್ರತಿ ವರ್ಷ ರಾಜ್ಯೋತ್ಸವಕ್ಕೆ ಸರ್ಕಾರದಿಂದ ₹1 ಕೋಟಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಬೇಕು, ನಗರದ ಪ್ರಮುಖ ಸ್ಥಳದಲ್ಲಿ ಇಮ್ಮಡಿ ಪುಲಕೇಶಿ ಹಾಗೂ ಕೃಷ್ಣದೇವರಾಯರ ಪ್ರತಿಮೆ ಸ್ಥಾಪಿಸಬೇಕು ಮತ್ತು ಕೃಷ್ಣದೇವರಾಯ ವೃತ್ತದಿಂದಲೇ ರಾಜ್ಯೋತ್ಸವ ಮೆರವಣಿಗೆ ಆರಂಭಿಸುವ ಕುರಿತು ಮುಖಂಡರು ಸಲಹೆ ನೀಡಿದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




