ಕೃಷಿ, ಸ್ಮಶಾನಭೂಮಿ ಒದಗಿಸುವುದು; ಅಸ್ಪೃಶ್ಯತೆ ತಡೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೃಷಿಕರಿಗೆ ಭೂ ಒಡೆತನ ಯೋಜನೆಯಡಿ ಜಮೀನು, ಅಗತ್ಯವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸುವುದರ ಜೊತೆಗೆ ಮುಂಬರುವ ದಿನಗಳಲ್ಲಿ ಸಮುದಾಯದ ಜನರ ಕುಂದುಕೊರತೆಗಳನ್ನು ಬಗೆಹರಿಸಲು ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭರವಸೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ(ಅ.೧೧) ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ/ಪಂಗಡಗಳ ಜನರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಪ್ರತಿ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಆದಾಗ್ಯೂ ಸ್ಮಶಾನ ಭೂಮಿ ಇಲ್ಲದ ಗ್ರಾಮಗಳಲ್ಲಿ ಭೂಮಿ ಒದಗಿಸಲು ಜಿಲ್ಲಾಡಳಿತಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಿದಂತಹ ಗ್ರಾಮಗಳಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ಕ್ರಮ ವಹಿಲಾಗುವುದು ಎಂದು ತಿಳಿಸಿದರು.
ಭೂ ಒಡೆತನ ಅಧಿನಿಯಮ ಪ್ರಕಾರ ಪರಿಶಿಷ್ಟ ಜಾತಿ/ಪಂಗಡದ ಜನರಿಗೆ ಭೂಮಿ ಮಂಜೂರು ಮಾಡಲು ತಿಳಿಸಲಾಗಿದೆ. ಆದರೆ ಲಭ್ಯವಿರುವ ಭೂಮಿಯನ್ನು ಗೋಮಾಳ ಎಂದು ಅಧಿಕಾರಿಗಳು ತಪ್ಪು ಮಾಹಿತಿ ನೀಡುತ್ತಿರುವುದರಿಂದ ಪರಿಶಿಷ್ಟರಿಗೆ ಭೂಮಿ ಲಭಿಸುತ್ತಿಲ್ಲ. ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಅದರಂತೆ ನಿಯಮಾವಳಿಯ ಪ್ರಕಾರ ಭೂಮಿ ಹಂಚಿಕೆ ಮಾಡಬೇಕು ಎಂದು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ನಾಮ ನಿರ್ದೇಶಿತ ಸದಸ್ಯ ಕರೆಪ್ಪ ಗುಡೆನ್ನವರ ಅವರು ಸಭೆಯಲ್ಲಿ ಒತ್ತಾಯಿಸಿದರು. ಈ ಬಗ್ಗೆ ಪ್ರತಿ ತಾಲ್ಲೂಕುಗಳಿಂದ ವರದಿಯನ್ನು ತರಿಸಿ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಸಮರ್ಪಕ ಬಳಕೆಯಾಗಲಿ:
ಭೂ ಒಡೆತನ ಯೋಜನೆಯಡಿ ಭೂಮಿಗಳಿಲ್ಲದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿಗೆ ಭೂಮಿ ಮಂಜೂರು ಮಾಡಬೇಕು. ಜಮೀನುಗಳ ಅಕ್ರಮ ಸಕ್ರಮಗೊಳಿಸುವ ಪ್ರಕ್ರಿಯೆಗಳಲ್ಲಿ ಅರ್ಹರ ದಾಖಲೆಗಳನ್ನು ಪರಿಶೀಲಿಸಿ ಅಕ್ರಮ ಸಕ್ರಮಗೊಳಿಸಬೇಕು ಎಂದು ಗುಡೆನ್ನವರ ಮನವಿ ಮಾಡಿಕೊಂಡರು.
ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವ ಮುಂಚೆ ಜನರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಬೇಕು. ಅದೇ ರೀತಿಯಲ್ಲಿ ಎಸ್.ಸಿ.ಪಿ-ಟಿ.ಎಸ್.ಪಿ ಅನುದಾನ ಸಮರ್ಪಕ ಬಳಕೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕರೆಪ್ಪ ಗುಡೆನ್ನವರ ಆಗ್ರಹಿಸಿದರು.
ಮೂಲಸೌಕರ್ಯ ಕಲ್ಪಿಸಿ:
ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಜನರಿಗೆ ಎಸ್.ಸಿ. ಪಿ- ಟಿ.ಎಸ್.ಪಿ ಕ್ರಿಯಾ ಯೋಜನೆಯಡಿ ರಸ್ತೆ ನಿರ್ಮಾಣ ಮಾಡಬೇಕು ಈ ಕುರಿತು ಅಧಿಕಾರಿಗಳು ಕಾಲಹರಣ ಮಾಡಬಾರದು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಎಸ್.ಸಿ. ಪಿ- ಟಿ.ಎಸ್.ಪಿ ಅನುದಾನವಿದೆ. ಈ ವರ್ಷದ ಕ್ರಿಯಾ ಯೋಜನೆಯ ಮೂಲಕ ಯೋಜನೆಗಳನ್ನು ಅನುಷ್ಠಾಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.
ಪ್ರತಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿಗಳಲ್ಲಿ ಪರಿಶಿಷ್ಟರ ಅನುಕೂಲಕ್ಕಾಗಿ ವಿವಿಧ ಯೋಜನೆಗಳ ಮೂಲಕ ಶೇಕಡಾ ೨೫% ರಷ್ಟು ಅನುದಾನ ಬಳಕೆಯಾಗಬೇಕಿದೆ. ಮಾಹಿತಿಯ ಪ್ರಕಾರ ಯಾವುದೇ ಪಂಚಾಯತಿಯಲ್ಲಿ ಅನುದಾನ ಸಮರ್ಪಕ ಬಳಕೆ ಆಗುತ್ತಿಲ್ಲ. ಅದರಂತೆ ಕೂಡಲೇ ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿಕೊಂಡರು.
ಅಸ್ಪ್ರಶ್ಯತೆ ನಿವಾರಣೆಗೆ ಕ್ರಮ:
ಅಥಣಿ ತಾಲೂಕಿನಲ್ಲಿ ಎಸ್.ಸಿ-ಎಸ್.ಟಿ ಸಮುದಾಯದ ಜನರಿಗೆ ಜಾತಿನಿಂದನೆ ಹಾಗೂ ಅಸ್ಪೃಶ್ಯತೆ ಆಚರಣೆ ಪ್ರಕರಣಗಳು ನಡೆದಿವೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಸರಿಯಾಗಿ ಸ್ಪಂದಿಸದೇ ದೂರುದಾರರನ್ನೇ ಬೆದರಿಸಲಾಗುತ್ತಿದೆ.
ಈ ರೀತಿ ಅಸಹಕಾರ ತೋರಿಸುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು, ಕೂಡಲೇ ಈ ಪ್ರಕರಣಗಳ ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಥಣಿ ತಾಲ್ಲೂಕು ಸೇರಿದಂತೆ ಕೆಲವು ಕಡೆಗಳಲ್ಲಿ ಅಸ್ಪ್ರಶ್ಯತೆ ಆಚರಣೆ ಇರುವುದು ಗಮನಕ್ಕೆ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆಗೆ
ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಭೆ ಕರೆದು ಅಸ್ಪ್ರಶ್ಯತೆ ಆಚರಣೆ ಹೋಗಲಾಡಿಸಲು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ತಾಲೂಕಾ ಮಟ್ಟದಲ್ಲಿ ಕುಂದು ಕೊರತೆ ಸಭೆ ಆಯೋಜನೆ:
ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಮಟ್ಟದಲ್ಲಿ ಬಹಳಷ್ಟು ದೂರುಗಳು ಕೇಳಿಬರುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಕುಂದು ಕೊರತೆ ಸಭೆ ನಡೆಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅದೇ ರೀತಿಯಲ್ಲಿ ಪ್ರತಿ ತಾಲೂಕಿನಲ್ಲಿ ಜನ ಸಂಪರ್ಕ ಸಭೆ ಹಾಗೂ ಕುಂದು ಕೊರತೆಗಳ ಸಭೆ ಆಯೋಜಿಸಲಾಗುವದು. ಮುಂದಿನ ದಿನಗಳಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ದೂರುಗಳನ್ನು ಸ್ವೀಕರಿಸಿ, ತ್ವರಿತ ಪರಿಹಾರಕ್ಕೆ ಕ್ರಮ ವಹಿಸಲು ಸೂಚಿಸುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ಈಗಾಗಲೇ ಸರ್ಕಾರಿ ಜಮೀನು ಹೊಂದಿದ ಗ್ರಾಮಗಳಲ್ಲಿ ಸರ್ವೇ ಮಾಡಿ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಈ ಕುರಿತು ಜಿಲ್ಲಾಡಳಿತ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗುವುದು. ಸ್ಮಶಾನ ಭೂಮಿ ಇರದ ಗ್ರಾಮಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದಲ್ಲಿ ಜಮೀನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಮನವಿ:
ರಾಮದುರ್ಗ ತಾಲ್ಲೂಕಿನಲ್ಲಿ ಕೆಲವು ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಘೋಷಿಸಲಾಗಿಲ್ಲ. ಆದ್ದರಿಂದ ಆ ತಾಂಡಾಗಳನ್ನು ಕೂಡಲೇ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಹಕ್ಕು ಪತ್ರ ವಿತರಿಸಬೇಕು ಎಂದು ಬಂಜಾರ ಸಮಾಜದ ಮುಖಂಡರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಈಗಾಗಲೇ ತಂಡಗಳನ್ನು ಪರಿವರ್ತಿಸಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸುವುದರ ಮೂಲಕ ಮನೆಗಳ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ ಬಾಕಿ ತಾಂಡಾಗಳ ಬಗ್ಗೆ ಮಾಹಿತಿ ಪಡೆದು ಕಂದಾಯ ಗ್ರಾಮಗಳನ್ನಾಗಿ ಬದಲಾಯಿಸಿ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಮಲ್ಲೇಶಿ ಚೌಗಲಾ, ಮಹದೇವ ತಳವಾರ ಮತ್ತಿತರರು ಮಾತನಾಡಿ, ಪರಿಶಿಷ್ಟ ಜನರ ಕುಂದುಕೊರತೆಗಳನ್ನು ಆಲಿಸಿ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಭೆಯನ್ನು ಆಯೋಜಿಸಿದೆ. ಇಂತಹ ಸಭೆಗಳನ್ನು ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ನಿಯಮಿತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ್ ಸಿ.ಇ.ಒ ಹರ್ಷಲ್ ಭೋಯರ್, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕರಾದ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತರಾದ
ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಪರಿಶಿಷ್ಟ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಆಗಮಿಸಿದ್ದ ಪರಿಶಿಷ್ಟ ಜಾತಿ/ವರ್ಗಗಳ ಜನರು ಹಾಗೂ ಸಂಘಟನೆಗಳ ಮುಖಂಡರು ತಮ್ಮ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು.
ಕೆಲವು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದ ಜಿಲ್ಲಾಧಿಕಾರಿಗಳು, ಕೆಲವು ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ