
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ. ಯೋಜನೆಗೆ ಫಲಾನುಭವಿಗಳು ದಾಖಲಿಸುವ ಪ್ರಕ್ರಿಯೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಕುಟುಂಬಗಳ ಅರ್ಹತೆಯನ್ನು ಪರಿಶೀಲಿಸುವ ಉದ್ದೇಶದಿಂದ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ.
ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಿ ಸೇವಾ ಸಿಂಧು ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿಯೆಯ ಕಾಲಾವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ನಿಗದಿತ ಅವಧಿಯಲ್ಲಿ ಎಲ್ಲ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗಡುವು ವಿಸ್ತರಣೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಅರ್ಹ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಯ ಪ್ರಯೋಜನ ಅರ್ಹ ಕುಟುಂಬಗಳಿಗೆ ಮಾತ್ರ ತಲುಪುವಂತೆ ಮಾಡಲು ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸಲಾಗುತ್ತಿದೆ.
ಯೋಜನೆಯ ದುರುಪಯೋಗ ತಡೆಗಟ್ಟುವುದು, ಅನರ್ಹ ಸಂಪರ್ಕಗಳನ್ನು ಗುರುತಿಸುವುದು ಹಾಗೂ ಫಲಾನುಭವಿಗಳ ದಾಖಲೆಗಳನ್ನು ನವೀಕರಿಸುವುದು ಈ ಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



