Kannada NewsKarnataka NewsLatestPolitics

*ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಂದ ಮುತ್ತಿಗೆ ಯತ್ನ; ಮಾಜಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಚಾಲನೆ ವೇಳೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಧಾವಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ತಡೆದ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವರಾದ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಬಿಜೆಪಿ ನಾಯಕರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದಿದ್ದಾರೆ.

ಸರ್ಕಾರ ಶಿಷ್ಠಾಚಾರ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಇಂದು ವಿಧನಸಭೆಯಲ್ಲಿ ವಿಧೇಯಕಗಳನ್ನು ಹರಿದು ಹಾಕಿ ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಕಲಾಪಕ್ಕೆ ಅಡ್ಡಿ ಪಡಿಸಿದ್ದರು. ಬಿಜೆಪಿ ಸದಸ್ಯರ ವರ್ತನೆಗೆ ಶಿಸ್ತುಕ್ರಮ ಕೈಗೊಂಡ ಸ್ಪೀಕರ್, ಹತ್ತು ಬಿಜೆಪಿ ಸದಸ್ಯರನ್ನು ಅಧಿವೇಶನದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಅಮಾನತುಗೊಂಡ ಬಿಜೆಪಿ ಸದಸ್ಯರನ್ನು ಮಾರ್ಷಲ್ ಗಳು ಹೊತ್ತು ತಂದು ಸದನದಿಂದ ಹೊರ ಹಾಕಿದ್ದರು. ಸ್ಪೀಕರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ಸ್ಪೀಕರ್ ಕಚೇರಿ ಬಾಗಿಲಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಶಾಸಕ ಯತ್ನಾಳ್ ಕುಸಿದು ಬಿದ್ದು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದೆ. ಇದರಿಂದಾಗಿ ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶ ಗೊಂಡಿರುವ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಚಾಲನೆ ವೇಳೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button