
ಪ್ರಗತಿವಾಹಿನಿ ಸುದ್ದಿ: ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಅಳವಡಿಸಿದ್ದ ಬೃಹತ್ ಕಟೌಟ್ ಕುಸಿದು ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ವೇದಿಕೆ ಮುಂಭಾಗ ಹಾಕಿದ್ದ ಬೃಹತ್ ಕಟೌಟ್ ಏಕಾಏಕಿ ಕುಸಿದು ಬಿದ್ದಿದೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವ ಮಹಿಳೆ ಇದ್ದು, ಅವರನ್ನು ಶಾರದಾ ಕಟ್ಟಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಮಾಹಿತಿ ಪಡೆದರು.
