*ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ: ಸಭೆಯ ಹೈಲೈಟ್ಸ್*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಹೈಲೈಟ್ಸ್ ಇಲ್ಲಿದೆ.
ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳು, ಯೋಜನೆಯ ದುರುಪಯೋಗಕ್ಕೆ ಮಾತ್ರ ಬ್ರೇಕ್ ಹಾಕಬೇಕು: ಸಿಎಂ ಸ್ಪಷ್ಟೋಕ್ತಿ
ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು
ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿತ್ತು
ಮೃತಪಟ್ಟಿರುವ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಹಣ ಹೋಗುತ್ತಿರುವುದನ್ನು ಪತ್ತೆಯಾಗಿದೆ. ಈ ರೀತಿ ದುರುಪಯೋಗ ಆಗಬಾರದು
ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್ ಮೆಸ್ಸೇಜ್ ಮೂಲಕ ಖಚಿತಪಡಿಸಬೇಕು
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ ಪ್ರಮುಖ ಅಂಶಗಳು:
ಏರ್‌ಟೆಲ್ ಬ್ಯಾಂಕ್‌ನಲ್ಲಿ ಯುಪಿಎ ಖಾತೆಗಳನ್ನು ತೆಗೆದು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಪತ್ತೆಯಾಗಿವೆ ಎನ್ನುವ ಬಗ್ಗೆ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಖಾತೆಗಳು ಕರ್ನಾಟಕ ರಾಜ್ಯದಲ್ಲಿ ಮಾತ್ರ ಇರಬೇಕು. ಇತರೆ ರಾಜ್ಯಗಳಲ್ಲಿರುವ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದೆ. ಇವುಗಳಿಗೆ ತಡೆ ಹಾಕಬೇಕು.
ನಮ್ಮ ರಾಜ್ಯದ ಯೋಜನೆಗಳು ನಮ್ಮ ರಾಜ್ಯದ ಫಲಾನುಭವಿಗಳಿಗೆ ಮಾತ್ರ ಸಿಗಬೇಕು. ಇತರೆ ರಾಜ್ಯದ ಮತದಾರರಿಗೆ ಯೋಜನೆಯ ಲಾಭ ಆಗುತ್ತಿದೆ. ಇದನ್ನು ತಡೆಯಬೇಕು.
ಅನುಕೂಲಸ್ಥರು ಯಾರಾದರೂ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟು ಕೊಡುವ ಮೂಲಕ ಇತರೆ ಅರ್ಹ ಫಲಾನುಭವವಿಗಳಿಗೆ ನೆರವಾಗಲು ಮುಂದಾದರೆ ಅಂಥವರನ್ನು ಪ್ರೋತ್ಸಾಹಿಸಬೇಕು.
ಕೇಂದ್ರದ ನೀತಿಗಳಿಂದ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆ, ಬೆಲೆ ಏರಿಕೆಯ ಪರಿಣಾಮಗಳು ಮತ್ತು ತಲಾ ಆದಾಯ ಕುಸಿಯುತ್ತಿರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಬರುತ್ತಿರುವ ಎರಡು ಪ್ರಮುಖ ತಾಂತ್ರಿಕ ಸಮಸ್ಯೆಗಳ ಬಗ್ಗೆ ಕೂಲಂಕುಷ ಚರ್ಚೆ ನಡೆಸಲಾಯಿತು.
ಮರಣ ಹೊಂದಿದ ಫಲಾನುಭವಿಗಳ ಸಂಖ್ಯೆ ಸಕಾಲದಲ್ಲಿ ದೊರೆಯದಿರುವ ಬಗ್ಗೆ ಇ-ಕೆವೈಸಿ ಹಾಗೂ ಬ್ಯಾಂಕ್ ಖಾತೆ/ಎನ್.ಪಿ.ಸಿ.ಐ ನಿಷ್ಕ್ರಿಯವಾಗಿರುವ ಫಲಾನುಭವಿಗಳ ಕುರಿತಂತೆ ಚರ್ಚೆ ನಡೆಸಲಾಯಿತು.
ಆಡಿಟರ್ ಜನರಲ್ ವರದಿಯಲ್ಲಿ ಉಲ್ಲೇಖವಾಗಿರುವ ಈ ಕೆಳಗಿನ ಸಂಗತಿಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಒಂದೇ ಖಾತೆಯಲ್ಲಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಮೂರು ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ಹೋಗಿದೆ ಎನ್ನುವ ಬಗ್ಗೆ ಎಜಿ ಅವರ ವರದಿ ಬಂದಿದೆ.
ಒಬ್ಬರೇ ಹಲವು ಖಾತೆಗಳನ್ನು ನೋಂದಾಯಿಸಿರುವುದನ್ನು ಎಜಿ ವರದಿಯಲ್ಲಿ ಉಲ್ಲೇಖವಾಗಿದೆ.
ಹಿಂದೆ ಪಡೆದ ಅರ್ಜಿಗಳಲ್ಲಿ ಉಲ್ಲೇಖವಾಗಿರುವ ಅಂಶಗಳ ನೈಜತೆ ಬಗ್ಗೆ ಪರಿಶೀಲನೆ ನಡೆಸದಿರುವ ಬಗ್ಗೆ ಪ್ರಸ್ತಾಪಸಲಾಯಿತು.
ಸಚಿವರಾದ ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಸಿಎಂ ಮುಖ್ಯ ಸಲಹೆಗಾರ ಸುನಿಲ್ ಕನಗೋಳ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್ ಆರ್ ಪಾಟೀಲ್, ಪುಷ್ಪಾ ಅಮರನಾಥ್, ಮೆಹರುಸ್ ಖಾನ್, ಬೆಂಗಳೂರು ಜಿಲ್ಲೆ ಅಧ್ಯಕ್ಷ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.




