Kannada NewsKarnataka NewsLatest

*ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಹೆಮ್ಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರ ಹೇಳಿಕೆ
ಉಡುಪಿ ರಾಜ್ಯ ಸರ್ಕಾರದ ಯೋಜನೆಗಳು ಸರ್ವರಿಗೂ ಅನುಕೂಲವಾಗುವಂತಿರಬೇಕು ಎಂಬ ದೃಷ್ಠಿಯಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಲಿಂಗಬೇಧಗಳಿಲ್ಲದೇ ಸರ್ವರಿಗೂ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ಮೆರೆಯುತ್ತಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗುವ ನೈಪುಣ್ಯತೆಯನ್ನು ಜನರು ಬೆಳೆಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ಇಲ್ಲಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸು ಹೆಮ್ಮೆಯ ಸಂಗತಿಯಾಗಿದೆ. ಈ ಐದು ಯೋಜನೆಗಳಿಂದ ಜನರ ಬದುಕು ಸಾಕಷ್ಟು ಬದಲಾಗಿದೆ ಎಂದರು. ನಾವು ಕಳೆದ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾದ ಪಂಚಗ್ಯಾರಂಟಿಗಳ ಭರವಸೆಯಂತೆ ಈಗಾಗಲೇ ಐದು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದರೊಂದಿಗೆ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಸಚಿವರು ಹೇಳಿದರು.

ರಾಜ್ಯದಾದ್ಯಂತ ತೀವ್ರ ಮಳೆಯ ಕೊರತೆಯಿಂದಾಗಿ ಬರಗಾಲದ ಛಾಯೆ ಆವರಿಸಿದೆ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಈ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದ್ದು, ಜಿಲ್ಲೆಯ ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಈಗಾಗಲೇ ಸೇರಿಸಲಾಗಿದೆ. ಬರ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದವಾಗಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಸಚಿವರು ಹೇಳಿದರು.

ಬರ ಸಮೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13,937 ಹೆಕ್ಟೇರ್ ನಷ್ಟು ಭತ್ತದ ಬೆಳೆ ಹಾನಿ ಅಂದಾಜಿಸಲಾಗಿದ್ದು, ರೂ.11 ಕೋಟಿ 85 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದಿಂದ ಮೊದಲನೇ ಕಂತಿನಲ್ಲಿ 19,071 ರೈತರಿಗೆ ರೂ.2 ಕೋಟಿ 64 ಲಕ್ಷ ಪರಿಹಾರವನ್ನು ಪಾವತಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button