ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊನೆಗೂ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಒಪ್ಪಿಗೆ ನೀಡಿದ್ದಾರೆ. ಜೂನ್ 16 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಸಮ್ಮತಿ ಸೂಚಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್‌ಡಿ ಕುಮಾರಸ್ವಾಮಿ, ದೇವೇಗೌಡರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ