Cancer Hospital 2
Bottom Add. 3

*ವಿದ್ಯುತ್ ಕಳ್ಳತನ ಮಾಡಿದ್ರಾ ಕುಮಾರಸ್ವಾಮಿ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಅವರ ನಿವಾಸಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ದೀಪಾವಳಿಗೆ ದೀಪಾಲಂಕಾರ ಮಾಡಲಾಗಿದ್ದು, ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮಮನೆ ದೀಪಾಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಕಂಬದಿಂದಲೇ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜಗತ್ತಿನ ಏಕೈಕ ಮಹಾಪ್ರಾಮಾಣಿಕ ವ್ಯಕ್ತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ವಿದ್ಯುತ್ ಕಳ್ಳತನಮಾಡುವಷ್ಟು ದಾರಿದ್ರ್ಯ ಬಂದಿದ್ದು ದುರಂತ. ಗೃಹಜ್ಯೋತಿಗೆ ಅರ್ಜಿ ಹಾಕಿದ್ದರೆ ಸರ್ಕಾರದಿಂದಲೇ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು ಕಾಂಗ್ರೆಸ್ ವ್ಯಂಗ್ಯವಾಡಿದೆ.

ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದು ಮನೆಗೆ ದೀಪಾಲಂಕಾರ ಮಾಡಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದಿದ್ದಾರೆ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.


Bottom Add3
Bottom Ad 2

You cannot copy content of this page