*ಕೊನೇ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಿಂದಲೇ ದೂರ ಉಳಿದ ಕುಮಾರಸ್ವಾಮಿ; ಪುತ್ರ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಸುತ್ತೂರಿನ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಭಾಷಣ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ವೇದಿಕೆಯಲ್ಲಿ ಆಸನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಕುಮಾರಸ್ವಾಮಿ ಅಮಿತ್ ಶಾ ಅವರ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದು, ಕುಮಾರಸ್ವಾಮಿಯವರು ಇಂದು ಅಮಿತ್ ಶಾ ಅವರನ್ನು ಭೇಟಿಯಾಗುತ್ತಿಲ್ಲ. ಅವರಿಗೆ ಸ್ವಲ್ಪ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ಇಂದು ಅವರು ವಿಶ್ರಾಂತಿಯಲ್ಲಿದ್ದಾರೆ. ಈ ಬಗ್ಗೆ ಅಮಿತ್ ಶಾ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕೊನೇ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮಕ್ಕೆ ಗೈರಾಗಿರುವ ಮಾಜಿ ಸಿಎಂ ಹೆಚ್.ಡಿ.ಕೆ ನಡೆ ತೀವ್ರ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ