
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸಿಟಿ ರವಿ ವಿರುದ್ಧ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದರು ಕಿಡಿಕಾರಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ.
ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು. ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಗುಡುಗಿದ್ದಾರೆ.
ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ