Kannada NewsKarnataka NewsLatestPolitics

*ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ; ರಾಜ್ಯಪಾಲರಿಗೆ ದೂರು ನೀಡಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ಸಲ್ಲಿಸಿದರು.

ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ರಾಜಭವನಕ್ಕೆ ನಿಯೋಗದಲ್ಲಿ ತೆರಳಿದ ಅವರು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೂಡಲೇ ತಾವು ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದ್ದು, ಎನ್ ಸಿಆರ್ ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರಕಾರ ಕೋರಿದೆ. ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿದರು.

ಬರ ಪರಿಹಾರ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ:

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಅವರು ದೂರಿದರು.

ರಾಜ್ಯ ಸರಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ರಾಜ್ಯಪಾಲರಿಂದ ಸಕಾರಾತ್ಮಕ ಸ್ಪಂದನೆ:

ರಾಜ್ಯಪಾಲರ ಭೇಟಿ ನಂತರ ರಾಜಭವನದ ಮುಂಭಾಗದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ನಮ್ಮ ಮನವಿಗೆ ರಾಜ್ಯಪಾಲರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆದು ನಾಡಿನ ಜನರ ಹಿತ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button