Latest

ರೈತರು, ಮನೆ-ಮಠ ಕಳೆದುಕೊಂಡವರಿಗೆ ಸರ್ಕಾರ ತಕ್ಷಣ ಸಹಾಯ ಮಾಡಬೇಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿದ್ದಾರೆ.

ಒಂದು ಕಡೆ ಕೊರೊನಾ ಸೋಂಕಿನ ಭೀತಿ, ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದಿದ್ದಾರೆ.

ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ, ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button