*ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿ ಸರ್ಕಾರ ಕರ್ನಾಟಕದ ಜೊತೆ ದೃಢವಾಗಿ ನಿಲ್ಲುತ್ತದೆ: ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದಾಗಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಡುವೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪ್ರವಾಹ ಪೀಡಿತ ಜನರ ರಕ್ಷಣೆಗೆ ಹಾಗೂ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು
ರಾಜ್ಯ ಸರಕಾರದ ಆದ್ಯ ಕರ್ತವ್ಯ ಎಂದು ತಿಳಿಸಿದ್ದಾರೆ.
ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. NDRF ಮತ್ತು SDRF ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು. ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ತಿಳಿಸಿದ್ದಾರೆ.
ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು.
ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ತಿಳಿಸಿದ್ದಾರೆ.