Latest

ತಾಯ್ನಾಡಿಗಿಂತ ಉತ್ತರದ ವ್ಯಾಮೋಹ ಅಧಿಕ; ತೇಜಸ್ವಿ ಸೂರ್ಯ ವಿರುದ್ಧ ಹೆಚ್.ಡಿ.ಕೆ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಸಂಸದರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಬಿಜೆಪಿಯ ಹಿರಿಯ ನಾಯಕರಿಗೂ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದಾರೆ.

ಟ್ವಿಟರ್ ನಲ್ಲಿ ಕಿಡಿಕಾರಿರುವ ಕುಮಾರಸ್ವಾಮಿ, ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ಎಂದು ಗುಡುಗಿದ್ದಾರೆ.

Related Articles

ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ನೋಡಿದ್ದೇನೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನ. ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆಗಳಿಗೆ, 28 ವಿಧಾನಸಭೆ ಕ್ಷೇತ್ರಗಳಿಗೆ, ನಾಲ್ಕು ಲೋಕಸಭೆ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿಲ್ಲ.ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು.ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button