Latest

ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಕ್ಕೆ ಆಕ್ಸಿಜನ್ ನೀಡಿಕೆಯಲ್ಲಿ ಮಾತ್ರವಲ್ಲ ಇದೀಗ ಲಸಿಕೆ ಹಂಚಿಕೆಯಲ್ಲಿಯೂ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಾರತಮ್ಯ ನೀತಿ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದು ಸಿಎಂ ಯಡಿಯೂರಪ್ಪನವರನ್ನು ಖಳನಾಯಕನನ್ನಾಗಿ ಮಾಡುವ ಉದ್ದೇಶವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ. ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.

ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಏಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ ಸಿಎಂ ಬಿಎಸ್ ವೈ ಸುದ್ದಿಗೋಷ್ಠಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button