Latest

ಶಿಕ್ಷಣ ಸಂಸ್ಥೆ, ವಿಶ್ವ ವಿದ್ಯಾಲಯಗಳು ಧ್ವಂಸ; ಉಕ್ರೇನ್ ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಕ್ರೇನ್ ನಲ್ಲಿ ಯುದ್ಧದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯರನ್ನು ಆರ್ ಲಿಫ್ಟ್ ಮಾಡಲಾಗುತ್ತಿದೆ. 20,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ನಡೆದಿದೆ. ಆದರೆ ಉಕ್ರೇನ್ ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು ಎಂಬುದೇ ಇದೀಗ ಕಾಡುತ್ತಿರುವ ಪ್ರಶ್ನೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ಆತಂಕ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ʼನಿಂದ ವಿದ್ಯಾರ್ಥಿಗಳನ್ನು ಏರ್‌ʼಲಿಫ್ಟ್‌ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. ಯುದ್ಧದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇಂತಹ ಸಂದರ್ಭದಲ್ಲಿ ಆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ʼಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ. ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ.

ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕ ಸರ್ಕಾರ 2,65,720 ಕೋಟಿ ರೂ.ಗಳಷ್ಟು ಬಜೆಟ್‌ ಮಂಡಿಸಿರುವಾಗ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್‌ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮತ್ತೆ 4 ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ರಷ್ಯಾ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button