
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಪ್ರತಿದಿನ ಲಕ್ಷಾಂತರ ಭಕ್ತರು ಕಿಲೋ ಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯುತ್ತಿದ್ದಾರೆ. ವಾರಾಂತ್ಯದ ಹಿನ್ನೆಲೆ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ.
ದೇವಾಲಯಕ್ಕೆ ಬರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅನಾಹುತ ಸಂಭವಿಸಿದರೆ ಎಂಬ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹಾಸನಕ್ಕೆ ಬರುವ ವಿಶೇಷ ಬಸ್ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಹಾಸನ ಎಸ್ ಪಿ, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ಗಳು ತಾತ್ಕಾಲಿಕ ಬಂದ್ ಆಗಿವೆ.
ಹಾಸನಾಂಬೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಒಂದು ವೇಳೆ ಕಾಲ್ತುಳಿತದಂತಹ ಅನಾಹುತ ಸಂಭವಿಸಿದರೆ ನಾವು ಹೊಣೆಗಾರರಲ್ಲ ಎಂದು ಎಸ್ ಪಿ, ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.