Kannada NewsKarnataka NewsLatest

*ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*: *ಬೆಂಗಳೂರು ಸೇರಿ ಹಲವು ಕಡೆ ಗುಡುಗು ಸಹಿತ ಮಳೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೂ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಐದು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನ ಮುನ್ಸೂಚನೆ ಗಮನಿಸುವುದು ಸೂಕ್ತ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕೆಲವು ಕಡೆ ಮಳೆಯಾಗಬಹುದು. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಅಕ್ಟೋಬರ್ 10ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 10ರಂದು ಮುಖ್ಯವಾಗಿ ಒಣಹವೆ ಇರಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಇನ್ನು, ಗುರುವಾರ ಸಂಜೆವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿಲ್ಲ. ಕರಾವಳಿಯ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಾತ್ರ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆಯಾಗಿದ್ದು, ಬಂಟ್ವಾಳದಲ್ಲಿ 2 ಸೆಂ.ಮೀ ಮಳೆ ದಾಖಲಾಗಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮತ್ತು ತುಮಕೂರು ಜಿಲ್ಲೆಯ ಶಿರಾದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ರಾಜ್ಯದ ಯಾವುದೇ ಭಾಗದಲ್ಲಿ ಭಾರಿ ಮಳೆ ದಾಖಲಾಗಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button