Belagavi NewsBelgaum NewsKannada NewsKarnataka News

*ರಾಜ್ಯದಾದ್ಯಂತ ಮುಂದಿನ 7 ದಿನ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 18ರಂದು ಗುಡುಗು ಮತ್ತು ಮಿಂಚು ಸಹಿತ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಅಕ್ಟೋಬರ್ 19ರಿಂದ 24ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಆರಂಭಿಕ ದಿನಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಕ್ಟೋಬರ್ 19ರಂದು ಗುಡುಗು, ಮಿಂಚು ಹಾಗೂ ಬಿರುಗಾಳಿಯ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಅಕ್ಟೋಬರ್ 20ರಿಂದ 22ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಈ ಅವಧಿಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 23 ಮತ್ತು 24ರಂದು ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 19ರಿಂದ 21ರವರೆಗೆ ಗುಡುಗು, ಮಿಂಚು ಹಾಗೂ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 22ರಿಂದ 24ರವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದ್ದು, ಈ ಅವಧಿಗೆ ಯಾವುದೇ ವಿಶೇಷ ಹವಾಮಾನ ಎಚ್ಚರಿಕೆ ನೀಡಲಾಗಿಲ್ಲ.

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸುವ ಸಂದರ್ಭಗಳಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Related Articles

Back to top button