
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯೂ ಮಳೆಯ ಅಬ್ಬರ ಮುಂದುವರೆಯಲಿದೆ.
ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಐದು ತಾಲೂಕುಗಳಲ್ಲಿ ನಾಳೆ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುಅರ ತಾಕೂಕುಗಳಲ್ಲಿ ನಾಳೆ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಈ ಬಾರಿ ವಿವಿಧ ತಾಲೂಕುಗಳಲ್ಲಿ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.