
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಹಳೆಯಾಗುವ ಸಾಧ್ಯತೆ ಇರುವ ಕಾರಣ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 10ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಹವಾಮಾನ ವರದಿಯ ಅತ್ಯಂತ ಆಘಾತಕಾರಿ ಅಂಶವೆಂದರೆ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ಬದಲಾವಣೆಗಳು. ಪ್ರತ್ಯಾವರ್ತ ಮಾರುತಗಳು ಚುರುಕಾಗಿರುವುದರಿಂದ ಮುಂದಿನ ಮುಂಗಾರು ಮಾರುತಗಳು ದುರ್ಬಲವಾಗುವ ಲಕ್ಷಣಗಳಿವೆ.




