
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಇಂದು ಹಾಗೂ ನಾಳೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಅಕ್ಟೋಬರ್ 23ರಂದು ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದ ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಅಕ್ಟೋಬರ್ 24ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗಬಹುದು.
ಗುರುವಾರ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಒಣ ಹವಾಮಾನ ದಾಖಲಾಗಿದೆ.
ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




