ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ, ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡ ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಆಸ್ಥವ್ಯಸ್ಥವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು, ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಕೆಲ ಜಿಲ್ಲಾಧಿಕಾರಿಗಳ ಜೊತೆ ಫೋನ್ ಮುಖಾಂತರ ಸಂಪರ್ಕದಲ್ಲಿದ್ದು, ಮಳೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಾಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು,ನದಿಗಳೆಲ್ಲ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆಗಸ್ಟ್ 10ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ