*ರಾಜ್ಯದಲ್ಲಿ ಮತ್ತೆ ಭಾರಿ ಮಳೆ: 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.
ಇನ್ನು ಅಕ್ಟೋಬರ್ 24ರವರೆಗೂ ಮಳೆ ಅಬ್ಬರಿಸಲಿದೆ. ಈ ಮೂಲಕ ದೀಪಾವಳಿ ಹಬ್ಬಕ್ಕೂ ಸಹ ಮಳೆ ಸುರಿಯಲಿದೆ. ಅಕ್ಟೋಬರ್ 21ರ ವರೆಗೆ ಕರ್ನಾಟಕ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಗಾಳಿಯು ಗಂಟೆಗೆ 35 ಕಿ.ಮೀ ವೇಗದಲ್ಲಿ ಬೀಸಲಿದೆ ಎನ್ನಲಾಗಿದೆ.
ರಾಜಧಾನಿ ಬೆಂಗಳೂರಲ್ಲಿ ಅಕ್ಟೋಬರ್ 19 ಹಾಗೂ 20 ರಂದು ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 12-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.