Belagavi NewsBelgaum NewsKannada NewsKarnataka NewsLatest

*ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕೊಡಗು, ಮಂಡ್ಯ ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯಲ್ಲೋ ಅಲರ್ಟ್’ ಘೋಷಿಸಿದೆ. 

ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಅಥವಾ ತುಂತುರು ಮಳೆಯಷ್ಟೇ ಆಗಬಹುದು ಎಂದು ಅಂದಾಜಿಸಲಾಗಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. 

Home add -Advt

ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಇಡೀ ಮಲೆನಾಡು ಭಾಗದಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿರಲಿದ್ದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸದ್ಯಕ್ಕೆ ತೀರಾ ಕ್ಷೀಣಿಸಿದೆ. 

ಕಲಬುರಗಿ, ಬೆಳಗಾವಿ, ಬೀದ‌ರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದು ಪ್ರಧಾನವಾಗಿ ಒಣ ಹವಾಮಾನ ಇರಲಿದ್ದು, ಸೆಖೆಯ ವಾತಾವರಣ ಮುಂದುವರಿಯಲಿದೆ. 

ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯನ್ನು ಹೊರತುಪಡಿಸಿದರೆ ಉತ್ತರ ಕರ್ನಾಟಕದಲ್ಲಿ ಯಾವುದೇ ಭಾರಿ ಮಳೆಯ ಮುನ್ಸೂಚನೆ ಇಲ್ಲ.

Related Articles

Back to top button