Kannada NewsKarnataka NewsLatest

*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಬೆನ್ನಲ್ಲೇ ಮಳೆ ಮತ್ತೆ ಚುರುಕಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. 

ಅಕ್ಟೋಬರ್ 5ರಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ಕಳೆದೊಂದು ವಾರದಿಂದ ಹಲವೆಡೆ ಮಳೆಯಾಗುತ್ತಿದ್ದು, ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಕೊಂಚ ನಿರಾಳತೆ ದೊರೆತಿದೆ. ಮಳೆಗಾಲದಲ್ಲೇ ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ ಹೋಗಿದ್ದು, ಹಲವು ಕೆರೆ-ಕುಂಟೆಗಳು ಬರಿದಾಗಿದ್ದವು.

ರಾಜ್ಯದ ಒಟ್ಟು 240 ತಾಲೂಕುಗಳ ಪೈಕಿ 217 ತಾಲೂಕುಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿದೆ.

ಈ ವೇಳೆ ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸುಮಾರು ₹46 ಸಾವಿರ ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಕೇಂದ್ರ ತಂಡಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಎನ್‌ಡಿಆರ್‌ಎಫ್ ನಿಯಮಗಳಡಿ ಮೊದಲ ಹಂತದಲ್ಲಿ ₹3,705.30 ಕೋಟಿ ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ಅಧ್ಯಯನ ತಂಡವು ರಾಜ್ಯದ ಬರ ಪರಿಸ್ಥಿತಿಯ ಕುರಿತು ವಾಸ್ತವ ವರದಿಯನ್ನು ಸಲ್ಲಿಸುವ ಭರವಸೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button