ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿದ್ದ ವೇಳೆ ಲಂಚ ಪಡೆದು ರಾಜಾತಿಥ್ಯ ನೀಡಿದ ಆರೋಪಕ್ಕೆ ಸಿಲುಕಿರುವ ಪೊಲೀಸ್ ಅಧಿಕಾರಿ ವಿರುದ್ಧದ ತನಿಖೆಗೆ ಅನುಮತಿ ಕೋರಿ ಎಸಿಬಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಎರಡು ವಾರದಲ್ಲಿ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಕುರಿತು ನಗರದ ಕೆ.ಎಸ್ ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ಆರೋಪಿ ಅಧಿಕಾರಿ ವಿರುದ್ಧ ಪ್ರಾಸಿಕ್ಯೂಷನ್ಗಾಗಿ ಪೂರ್ವಾನುಮತಿ ಕೋರಿ ಎಸಿಬಿ ಸಲ್ಲಿಸಿರುವ ಮನವಿಯನ್ನು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಗೃಹ ಮಂತ್ರಿಗಳಿಗೆ ರವಾನಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡರು.
ವಾದ ಪರಿಗಣಿಸಿದ ಪೀಠ, ಭ್ರಷ್ಟಾಚಾರ ತಡೆ ಕಾಯ್ಗೆಯ ಸೆಕ್ಷನ್ 19ರ ಅಡಿ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ನೀಡುವ ಸಂಬಂಧ ಗೃಹ ಇಲಾಖೆ 2 ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು. ಇಲ್ಲಿದಿದ್ದರೆ ಗೃಹ ಇಲಾಖೆ ಕಾರ್ಯದರ್ಶಿ ಹಾಜರಾಗಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜನವರಿಗೆ ಮುಂದೂಡಿತು.
ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸುವ ಸರ್ಕಾರದ ನಿರ್ಣಯಕ್ಕೆ ಆಕ್ಷೇಪಿಸಿರುವ ಹೈಕೋರ್ಟ್, ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪುನರುಚ್ಚರಿಸಿತು.
ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತಿ ಭಾರತ ಟ್ರಸ್ಟ್ ಹಾಗೂ ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ್, ಭಾಷೆ ಗಂಭೀರ ಪರಿಣಾಮ ಬೀರುವಂತಹ ವಿಷಯ. ಈ ಕುರಿತು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದ ಕೂಡಲೇ ನಿಲುವು ಸ್ಪಷ್ಟಪಡಿಸಲಾಗುವುದು. ಅದಕ್ಕೆ ಒಂದಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ, ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮನವಿ ಮಾಡಿ, ರಾಜ್ಯದ ಪದವಿ ಕಾಲೇಜುಗಳಲ್ಲಿ 4 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅವರೆಲ್ಲರೂ ಕನ್ನಡ ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ಭಾಷೆ ಕಲಿಕೆಗೆ ಅಡ್ಡಿಯಾಗುವಂತೆ ಯಾವುದೇ ಮಧ್ಯಂತರ ಆದೇಶ ನೀಡಬಾರದು ಎಂದು ಕೋರಿದರು.
ವಾದ ಆಲಿಸಿದ ಪೀಠ, ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಆದರೆ, ಕನ್ನಡ ಕಲಿಯಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಮುಂದಿನ ಆದೇಶದವರೆಗೂ ಕಡ್ಡಾಯಗೊಳಿಸುವುದಾಗಲಿ, ಬಲವಂತ ಮಾಡುವುದಾಗಲಿ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದಕ್ಕೆ ಹಾಕಿತು.
ರಾಜ್ಯದಲ್ಲಿ ಮತ್ತೆ 5 ಜನರಲ್ಲಿ ಒಮಿಕ್ರಾನ್ ಪತ್ತೆ: ಬೆಳಗಾವಿಯಲ್ಲೂ ಓರ್ವರಿಗೆ ಒಮಿಕ್ರಾನ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ