Kannada NewsKarnataka NewsLatest

*ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಇದ್ದರೂ ಪೋಕ್ಸೋ ಕಾಯ್ದೆಯಡಿ ಅಪರಾಧ*

ಹೈಕೋರ್ಟ್ ಮಹತ್ವದ ತೀರ್ಪು

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಸಂಗ್ರಹಿಸಿಟ್ಟಿರುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (ಐಟಿ) ಅಪರಾಧವಾಗುತ್ತದೆ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ಮೊಬೈಲ್​ನಲ್ಲಿ ಹೇರಳವಾಗಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೊ-2012ರ ಸೆಕ್ಷನ್‌ 15 ಮತ್ತು ಐಟಿ ಕಾಯ್ದೆ-2000ರ ಸೆಕ್ಷನ್‌ 67(ಬಿ) ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್‌ (38) ಎಂಬವರು ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರುಈ ಆದೇಶ ಹೊರಡಿಸಿದ್ದಾರೆ.

ಅರ್ಜಿದಾರರ ವಾದವನ್ನು ತಿರಸ್ಕರಿಸಿರುವ ನ್ಯಾಯಪೀಠ, ಮಕ್ಕಳ ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು ಪ್ರಸರಣ ಮಾಡುವುದಷ್ಟೇ ಅಲ್ಲ, ಪ್ರಸಾರವಾಗುವ ಸಾಮರ್ಥ್ಯ ಹೊಂದಿರುವ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋವನ್ನು ಸಂಗ್ರಹಿಸಿಡುವುದೂ ಸಹ ಪೋಕ್ಸೊ ಕಾಯ್ದೆಯ ಸೆಕ್ಷನ್ 15ರ ಅಡಿ ಅಪರಾಧವಾಗುತ್ತದೆ.

ಈ ಕುರಿತು ಸುಪ್ರೀಂ ಕೋರ್ಟ್‌ ಸಹ ತೀರ್ಪು ನೀಡಿದೆ. ಅರ್ಜಿದಾರರು ತಮ್ಮ ಫೋನ್‌ನಿಂದ ಮಕ್ಕಳ ಅಶ್ಲೀಲ ಚಿತ್ರ ಮತ್ತು ಫೋಟೋವನ್ನು ರವಾನಿಸಿಲ್ಲ ಎಂಬ ಕಾರಣಕ್ಕಾಗಿ ಅವರು ಅಪರಾಧಕ್ಕೆ ಹೊಣೆಗಾರರಾಗಿರುವುದಿಲ್ಲ ಎಂದು ಅರ್ಥೈಸಲಾಗದು ಎಂದು ಪೀಠ ಸ್ಪಷ್ಟಪಡಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button