Kannada NewsKarnataka News

*ಮಂಗಳವಾರ ಸಿಎಂ ಡಿ.ಕೆ. ಶಿವಕುಮಾರ್‌ರಿಂದ ರಾಜ್ಯದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ*

ಮಂಗಳವಾರ ಸಿಎಂ ಡಿ.ಕೆ. ಶಿವಕುಮಾರ್‌ರಿಂದ ರಾಜ್ಯದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಪ್ರಗತಿವಾಹಿನಿ ಸುದ್ದಿ/ ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.11ರಂದು ರಾಜ್ಯದ ಎಲ್ಲ ಹಂತದ ಅಧಿಕಾರಿಗಳು ಹಾಗೂ ನೌಕರರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೂಚನೆ ಹೊರಡಿಸಿದ್ದು, ಆ.11ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಡಿಯೋ ಸಂವಾದ ನಡೆಯಲಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರ್ಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ನೇರವಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಪಾಲ್ಗೊಳ್ಳಲಿದ್ದಾರೆ.
ಅಲ್ಲದೆ, ರಾಜ್ಯದ ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿರುವ ಎಲ್ಲ ಅಧಿಕಾರಿಗಳು ಮತ್ತು ನೌಕರರು ನಿಗದಿತ ಸ್ಥಳಗಳಿಂದ ವಿಡಿಯೋ ಸಂವಾದದಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನ, ಆಡಳಿತಾತ್ಮಕ ವಿಷಯಗಳು ಹಾಗೂ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ಆಡಳಿತಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಮುಖ್ಯಮಂತ್ರಿ ಅಧಿಕಾರಿಗಳಿಂದ ನೇರವಾಗಿ ಮಾಹಿತಿ ಪಡೆದು ಚರ್ಚೆ ನಡೆಸುವ ಸಾಧ್ಯತೆ ಇದೆ.
ರಾಜ್ಯದ ಆಡಳಿತ ಯಂತ್ರದ ವಿವಿಧ ಹಂತಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸುವ ಈ ವಿಡಿಯೋ ಸಂವಾದಕ್ಕೆ ಎಲ್ಲರೂ ನಿಗದಿತ ಸಮಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಆ.11ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಸಂವಾದದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button