
ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅನೇಕ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆ.18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಾರೀ ಮಳೆಯಾಗಿದ್ದು, ಈ ಹಿನ್ನಲೆ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರಿ ಒಟ್ಟು 11 ತಾಲೂಕುಗಳ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬಿಡದೆ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಎನ್.ಆರ್.ಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ ಆಲ್ಲೂರು, ವಸ್ತಾರೆ, ಆವತಿ ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ, ಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪಿಯು ಮತ್ತು ಪದವಿ ಕಾಲೇಜಿಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಇತ್ತ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಇಂದು ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೋರು ಗಾಳಿ ಮಳೆಯಾಗುವ ಸಾಧ್ಯತೆಯಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.