Belagavi NewsBelgaum NewsCrimeKannada NewsKarnataka NewsTravel

*ಅಥಣಿ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್‌ ಹಾಗೂ ರಸ್ತೆ ಅಪಘಾತದಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಅಥಣಿ ಹೊರವಲಯದ ಮುರಗುಂಡಿ–ಅಥಣಿ ರಸ್ತೆಯ ಮಧ್ಯಮಾರ್ಗದಲ್ಲಿ ನಡೆದಿದೆ. 

ಸಂಬರಗಿ ಗ್ರಾಮದ ಮೂಲದ ಮೋಹನ ಅಶೋಕ ಮೀಸಾಳ (23) ಮೃತ ಯುವಕ ಎಂದು ಗುರುತಿಸಲಾಗಿದೆ. ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 

ಮೋಹನ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಭಾರೀ ಪ್ರಮಾಣದಲ್ಲಿ ರಕ್ತಸ್ರಾವವಾಗಿದ್ದು, ಮೋಹನ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ವೇಳೆ ಅವರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ನಡೆದ ಸ್ಥಳ, ವಾಹನದ ಸ್ಥಿತಿ ಹಾಗೂ ಘಟನೆಗೆ ಕಾರಣವಾಗಿರುವ ಅಂಶಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಮೃತದೇಹವನ್ನು ಅಗತ್ಯ ಕಾನೂನು ಪ್ರಕ್ರಿಯೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾತಿ ಹಾಗೂ ತನಿಖೆ ಮುಂದುವರಿದಿದೆ.

Related Articles

Back to top button