ಪ್ರಗತಿವಾಹಿನಿ ವಿಶೇಷ: ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ. ‘ದಸರಾ’ ವಿಜಯದ ಹಬ್ಬವಾಗಿರುವುದರಿಂದ ಈ ದಿನ ರಾಜರಿಗೆ ವಿಶೇಷ ವಿಧಿಯನ್ನು ಹೇಳಲಾಗಿದೆ. ಇದು ವಿಜಯದ, ಪರಾಕ್ರಮದ ಹಬ್ಬವಾಗಿದೆ.
ಅರ್ಜುನನು ಅಂತವಾಸದಲ್ಲಿ ಶಮಿಯ ಉಡಿಯಲ್ಲಿ ಇಟ್ಟ ಶಸ್ತ್ರಗಳನ್ನು ತೆಗೆದು, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವಸೈನ್ಯದ ಮೇಲೆ ಆಕ್ರಮಣ ಮಾಡಿ ಇದೇ ದಿನ ವಿಜಯವನ್ನು ಸಂಪಾದಿ ಸಿದ್ದನು. ಈ ದಿನದಂದೇ ಶ್ರೀರಾಮಚಂದ್ರನು ರಾವಣನ ಮೇಲೆ ವಿಜಯ ಪಡೆದು ಆತನನ್ನು ವಧಿಸಿದ್ದನು ಎಂದು ನಂಬಲಾಗುತ್ತದೆ. ಈ ಘಟನೆಗಳ ಸಂಕೇತವಾಗಿ ಈ ದಿನಕ್ಕೆ ವಿಜಯದಶಮಿ ಎಂದು ಹೆಸರು ಬಂದಿದೆ.
ಹಾಗೆ ನೋಡಿದರೆ ಈ ಹಬ್ಬವು ಬಹಳ ಪ್ರಾಚೀನ ಕಾಲದಿಂದ ನಡೆದು ಬಂದಂತಿದೆ. ಪ್ರಾರಂಭದ ಕಾಲದಲ್ಲಿ ಇದು ಕೃಷಿಗೆ ಸಂಬಂಧಪಟ್ಟ ಒಂದು ಲೋಕೋತ್ಸವವಾಗಿತ್ತು. ಮಳೆಗಾಲದಲ್ಲಿ ಬಿತ್ತಿದ ಪ್ರಥಮ ಪೈರು ಮನೆಗೆ ಬಂದಾಗ ರೈತರು ಈ ಉತ್ಸವ ವನ್ನು ಆಚರಿಸುತ್ತಿದ್ದರು.
ಕಲಶ ಸ್ಥಾಪನೆಯ ದಿನ ಕಲಶದ ಕೆಳಗಿನ ಪೀಠದಲ್ಲಿ ಒಂಭತ್ತು ಧಾನ್ಯಗಳನ್ನು ಬಿತ್ತುತ್ತಾರೆ. ದಸರಾದಂದು ಈ ಧಾನ್ಯದ ಮೊಳಕೆಗಳನ್ನು ತೆಗೆದು ದೇವ ರಿಗೆ ಅರ್ಪಿಸುತ್ತಾರೆ. ಅನೇಕ ಕಡೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಗಳನ್ನು ಕೊಯ್ದು ತಂದು ಅವುಗಳನ್ನು ಮನೆಯ ಪ್ರವೇಶದ್ವಾರಕ್ಕೆ ತೋರಣದಂತೆ ಕಟ್ಟುತ್ತಾರೆ. ಈ ಪದ್ಧತಿಯಿಂದ ಕೃಷಿಗೆ ಸಂಬಂಧಪಟ್ಟ ಈ ಹಬ್ಬದ ಸ್ವರೂಪ ಸ್ಪಷ್ಟವಾಗುತ್ತದೆ. ಮುಂದೆ ಈ ಹಬ್ಬಕ್ಕೆ ಧಾರ್ಮಿಕ ಸ್ವರೂಪವನ್ನು ಕೊಡಲಾಯಿತು ಮತ್ತು ಇತಿಹಾಸ ಕಾಲದಲ್ಲಿ ಇದು ರಾಜಕೀಯ ಸ್ವರೂಪದ ಹಬ್ಬವಾಯಿತು.
(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು’)
ಸಂಗ್ರಹ:
ಶ್ರೀ. ವಿನೋದ ಕಾಮತ್,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : 9342599299)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ