*ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ*: *ಹಂತಕನಿಗೆ ಮಹತ್ವದ ತೀರ್ಪು ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಕೊನೆಗೂ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರೀತಿಯ ವಿಚಾರದಲ್ಲಿ ಆರಂಭವಾದ ವಿವಾದ ಯುವತಿಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿತ್ತು. ಕೊಲೆ ಬಳಿಕ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೊನೆಗೆ ಬಂಧಿಸಲಾಗಿತ್ತು. ಸುದೀರ್ಘ ತನಿಖೆ, ಸಾಕ್ಷ್ಯಾಧಾರಗಳ ಪರಿಶೀಲನೆ ಬಳಿಕ ಇದೀಗ ಹಂತಕನಿಗೆ ಕಠಿಣ ಶಿಕ್ಷೆ ಪ್ರಕಟವಾಗಿದೆ.
2024ರ ಮೇ ತಿಂಗಳಲ್ಲಿ ನಡೆದಿದ್ದ 20 ವರ್ಷದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್. ಸಾವಂತ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ.ಆರ್. ಅವರು ನವೆಂಬರ್ 25ರಂದು ಈ ಆದೇಶ ಹೊರಡಿಸಿದ್ದಾರೆ. ಜೀವಾವಧಿ ಶಿಕ್ಷೆಯ ಜೊತೆಗೆ 45 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದ್ದಾರೆ.
ನವೆಂಬರ್ 21ರಂದು ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 451, 302 ಮತ್ತು 201ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಲ್ಲಿ ಆತ ತಪ್ಪಿತಸ್ಥನೆಂದು ತೀರ್ಪು ನೀಡಲಾಗಿತ್ತು. ಶಿಕ್ಷೆಯ ಪ್ರಮಾಣವನ್ನು ನವೆಂಬರ್ 25ಕ್ಕೆ ಕಾಯ್ದಿರಿಸಲಾಗಿತ್ತು. ಇದೀಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ತನ್ನ ಮನೆಯಲ್ಲೇ ಅಂಜಲಿ ಬರ್ಬರವಾಗಿ ಹತ್ಯೆಯಾಗಿದ್ದಳು. 20 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಅಂಜಲಿ ಮತ್ತು ಗಿರೀಶ್ ನಡುವಿನ ಪ್ರೀತಿಯ ವಿಚಾರದಲ್ಲಿ ಬಿರುಕು ಮೂಡಿದ್ದೇ ಹತ್ಯೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಅಂಜಲಿ ಆತನಿಂದ ಸಂಪರ್ಕ ಕಡಿದುಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.
ಕೊಲೆ ಮಾಡಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ದಾವಣಗೆರೆ ಸಮೀಪ ರೈಲ್ವೆ ಪೊಲೀಸರ ನೆರವಿನಿಂದ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆತನಿಗೆ ಚಿಕಿತ್ಸೆ ಕೊಡಿಸಿದ ಬಳಿಕ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.
ಅಂಜಲಿ ಕೊಲೆಯಾಗುವುದಕ್ಕೂ ಮುನ್ನ ಆರೋಪಿ ಬೆದರಿಕೆ ಹಾಕಿದ್ದ ಎಂಬ ಆರೋಪವೂ ಪ್ರಕರಣದಲ್ಲಿ ಪ್ರಮುಖವಾಗಿತ್ತು. ಈ ಕುರಿತು ಅಂಜಲಿ ನೀಡಿದ್ದ ದೂರನ್ನು ಪೊಲೀಸರು ನಿರ್ಲಕ್ಷಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಪೂರ್ಣಗೊಳಿಸಿದ ಸಿಐಡಿ ಅಧಿಕಾರಿಗಳು 2024ರ ಆಗಸ್ಟ್ನಲ್ಲಿ ನ್ಯಾಯಾಲಯಕ್ಕೆ 494 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ವಾದ-ಪ್ರತಿವಾದಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿತ್ತು. ಇದೀಗ ಜೀವಾವಧಿ ಶಿಕ್ಷೆ ಮತ್ತು 45 ಸಾವಿರ ರೂಪಾಯಿ ದಂಡ ವಿಧಿಸುವ ಮೂಲಕ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಿಸಿದೆ.




