Belagavi NewsBelgaum NewsKannada NewsKarnataka NewsNationalPolitics

*ಹುಬ್ಬಳ್ಳಿ- ಬೆಳಗಾವಿ- ಪುಣೆ ವಂದೇ ಭಾರತ್ ರೈಲು*; *ಬೆಳಗಾವಿ- ಬೆಂಗಳೂರಿಗಿಲ್ಲ ಸಂಪರ್ಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಬೆಳಗಾವಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದು, ಬಹು ಬೇಡಿಕೆಯ ಬೆಂಗಳೂರು – ಬೆಳಗಾವಿ ವಂದೇ ಭಾರತ ಯೋಜನೆ ಹಿಂದೆ ಬಿದ್ದಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈ ವಿಷಯ ತಿಳಿಸಿದ್ದು, ತಮ್ಮ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ -ಬೆಳಗಾವಿ- ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಸಂದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಬೆಳಗಾವಿ- ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಬೆಳಗಾವಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು.

ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು  ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು. 

ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ

ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಆದರೆ, ಬೆಳಗಾವಿ ಜನರ ಬಹು ಬೇಡಿಕೆಯಾಗಿರುವ ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲು ಯೋಜನೆ ನನೆಗುದಿಗೆ ಬಿದ್ದಿದೆ. ಪುಣೆಯ ಜೊತೆ ವ್ಯಾಪಾರ ವ್ಯವಹಾರ ವೃದ್ಧಿಯಾಗಬಹುದು, ಆದರೆ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರು ಸಂಪರ್ಕ ಮತ್ತು ವ್ಯಾಪಾರ ವ್ಯವಹಾರಕ್ಕೆ ಇದರಿಂದ ಹಿನ್ನಡೆಯಾಗಲಿದೆ ಎನ್ನುವುದು ಬೆಳಗಾವಿ ಜನರ ಆಕ್ಷೇಪವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button