*ಬಿಜೆಪಿ ಕಾರ್ಯಕರ್ತೆ ಥಳಿತ ಆರೋಪ ಪ್ರಕರಣ: ಇಲಾಖಾ ತನಿಖೆಗೆ ಕೇಂದ್ರ ಸಚಿವ ಜೋಶಿ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಕಾರ್ಯಕರ್ತೆ ಸುಜಾತಾರನ್ನು ಪೊಲೀಸರು ಥಳಿಸಿದ ಪ್ರಕರಣ ಬಗ್ಗೆ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಪ್ರಕರಣ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಸಚಿವರು, ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ರವೀಶ್, ನಂದಗಾವಿ ಅವರಿಂದ ಪ್ರಕರಣ ಕುರಿತು ಮಾಹಿತಿ ಪಡೆದ ಸಚಿವರು, ತಪ್ಪಿತಸ್ಥರ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಅಲ್ಲದೇ, ತಕ್ಷಣವೇ ಇಲಾಖಾ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ನಿರ್ದೇಶಿಸಿದರು.
ಬಿಎಲ್ ಓ ಗಳಿಗೆ ರಕ್ಷಣೆ ನೀಡಿ:
ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಬಿಎಲ್ ಒಗಳಿಗೆ ಸೂಕ್ತ ರಕ್ಷಣೆ ನೀಡುವ ಬಗ್ಗೆಯೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಇದಕ್ಕೂ ಮುನ್ನ, ಪೋಲಿಸರಿಂದ ಥಳಿತಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ- ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ವಾನ್, ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಮಹೇಶ ಕೌತಳ ಇತರರು ಇದ್ದರು.




