Politics

*ಸಿಬಿಐ ಆಯ್ತು ಈಗ NIAಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ತಡೆಯೇ?*

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ NIAಯಿಂದ ಹಿಂಪಡೆವ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ನಿರ್ಬಂಧ ಹೇರಿದ ಕಾಂಗ್ರೆಸ್ ಸರ್ಕಾರ ಈಗ ಭಯೋತ್ಪಾದನಾ ಪ್ರಕರಣಗಳ NIA ತನಿಖೆಗೂ ತಡೆವೊಡ್ಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿ, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIA ತನಿಖೆಯಿಂದ ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣ NIA ತನಿಖೆಯಿಂದ ವಾಪಸ್‌ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವ ಸಂಪುಟ ನಿರ್ಧರಿಸಿರುವುದು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆಕ್ರೋಶ ಹೊರ ಹಾಕಿದರು ಜೋಶಿ.

ಹಳೇ ಹುಬ್ಬಳ್ಳಿ ಗಲಭೆ ಭಯೋತ್ಪಾದನಾ ಚಟುವಟಿಕೆಗೆ ಸಮಾನವಾದ ಘಟನೆಯಾಗಿದ್ದು, ಪ್ರಕರಣ ಎನ್ಐಎ ನ್ಯಾಯಾಲಯದಲ್ಲಿದೆ. ಹಾಗಿದ್ದಾಗ್ಯೂ ಸರ್ಕಾರ ಈ ನಿಲುವು ತಳೆದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಹೈಕೋರ್ಟ್, ಸುಪ್ರಿಂಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನು ತಿರಸ್ಕೃತಗೊಂಡಿದೆ. ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಗಳು ಪ್ರಕರಣ ಹಿಂಪಡೆಯಲು ವಿರೋಧಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ಗಲಭೆಕೋರರಿಗೆ ಕುಮ್ಮಕ್ಕು ಕೊಡುವಂತಿದೆ ಎಂದು ಪ್ರಲ್ಹಾದ ಜೋಶಿ ಹರಿ ಹಾಯ್ದರು.

ರಾಜ್ಯ ಸರ್ಕಾರ, ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗುವವರನ್ನು ಬೆಂಬಲಿಸುವಂಥ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಅತ್ಯಂತ ಗಂಭೀರ ಪ್ರಕರಣ. NIA ಯಿಂದ ಹಿಂಪಡೆಯುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತಾಂಧ ಶಕ್ತಿಗಳ, ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಅದಕ್ಕೆ ತದ್ವಿರುದ್ಧವಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ತುಷ್ಟೀಕರಣದ ಪರಾಕಾಷ್ಠೆ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIA ಯಿಂದ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಟೆ ಮೆರೆಯುತ್ತಿದೆ ಎಂದು ಜೋಶಿ ವಾಗ್ದಾಳಿ ಮಾಡಿದರು.

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಹಿಂದೂ-ಮುಸ್ಲಿಂ ಪ್ರಶ್ನೆಯಲ್ಲ. ದೇಶದ್ರೋಹಿ, ಸಮಾಜ ದ್ರೋಹಿಗಳ ವಿರುದ್ಧದ ಹೋರಾಟ, ಭಾರತದ ಸಂವಿಧಾನ, ಕಾನೂನು ಮಧ್ಯೆ ಆಗಿರೋ ಹೋರಾಟ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button