*ಕೆಎಲ್‌ಇ ನೂತನ ಆಸ್ಪತ್ರೆ ಉದ್ಘಾಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಮಿತ ಕೋರೆ ಆತ್ಮೀಯ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯ ನೂತನ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೆಎಲ್‌ಇ ಸಂಸ್ಥೆಯ ಚೇರಮನ್ ಅಮಿತ ಕೋರೆ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಮಿತ ಕೋರೆ ಕೋರೆ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಕೆಎಲ್‌ಇ ಸಂಸ್ಥೆಯ ವಿವಿಧ ಪದಾಧಿಕಾರಿಗಳು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಉತ್ತರ ಕರ್ನಾಟಕದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಎಲ್‌ಇ ಸಂಸ್ಥೆ ಹಲವು ದಶಕಗಳಿಂದ ಸಲ್ಲಿಸುತ್ತಿರುವ ಸೇವೆಯ ಮತ್ತೊಂದು ಮಹತ್ವದ ಹೆಜ್ಜೆಯಾಗಿ ನೂತನ ಆಸ್ಪತ್ರೆ ರೂಪುಗೊಂಡಿದೆ. ಆಧುನಿಕ ವೈದ್ಯಕೀಯ ಸೌಲಭ್ಯಗಳು, ಸುಧಾರಿತ ಚಿಕಿತ್ಸಾ ವ್ಯವಸ್ಥೆ ಹಾಗೂ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗಿದೆ.
ನೂತನ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿರುವುದು ಕೆಎಲ್‌ಇ ಸಂಸ್ಥೆಯ ಪಾಲಿಗೆ ಮಹತ್ವದ ಸಂದರ್ಭವಾಗಿದೆ. ಡಾ. ಪ್ರಭಾಕರ ಕೋರೆ ಅವರು ಆಸ್ಪತ್ರೆಯ ಉದ್ದೇಶ, ಆರೋಗ್ಯ ಕ್ಷೇತ್ರದಲ್ಲಿ ಕೆಎಲ್‌ಇ ಸಂಸ್ಥೆಯ ಮುಂದಿನ ಯೋಜನೆಗಳು ಹಾಗೂ ಉತ್ತರ ಕರ್ನಾಟಕದ ಜನರಿಗೆ ಲಭ್ಯವಾಗಲಿರುವ ವೈದ್ಯಕೀಯ ಸೌಲಭ್ಯಗಳ ಕುರಿತು ಸಚಿವರೊಂದಿಗೆ ಚರ್ಚಿಸಿದರು.
ಕೆಎಲ್‌ಇ ಸಂಸ್ಥೆಯ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ವಿಸ್ತರಣೆಯಲ್ಲಿ ನೂತನ ಆಸ್ಪತ್ರೆ ಮತ್ತೊಂದು ಪ್ರಮುಖ ಮೈಲಿಗಲ್ಲಾಗಲಿದೆ.
ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಜನರಿಗೆ ಅತ್ಯಾಧುನಿಕ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ಈ ಆಸ್ಪತ್ರೆ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.




