ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪನವರೇ ಇನ್ನೂ ಮೂರು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ಯಡಿಯೂರಪ್ಪನವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ. ಇದು ಕೇವಲ ಸುಳ್ಳು ಸುದ್ದಿ. ಶಾಸಕರ ಸಭೆ ನಡೆಸುವಷ್ಟು ದೊಡ್ಡ ನಾಯಕನೂ ನಾನಲ್ಲ. ಸಿಎಂ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ. ಜಗದೀಶ್ ಶೆಟ್ಟರ್ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೆಲವು ಅತೃಪ್ತ ಆತ್ಮಗಳು ಇಂತಹ ಸುಳ್ಳು ವದಂತಿಗಳನ್ನು ಹರಡಿಸುತ್ತಿವೆ ಎಂದು ಕಿಡಿಕಾರಿದರು.
ಸಿಎಂ ಯಡಿಯೂರಪ್ಪನವರು ಅನೇಕ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಅವರ ನೇತೃತ್ವದಲ್ಲಿಯೇ ಇನ್ನೂ ಮೂರು ವರ್ಷಗಳ ಕಾಲ ರಾಜ್ಯ ಸರ್ಕಾರ ಮುಂದುವರಿಯಲಿದೆ ಎಂದು ಹೇಳಿದರು.
ಇದೇ ವೇಳೆ ಕೊರೋನಾ ವೈರಸ್ ಹರಡುತ್ತಿರುವ ಬಗ್ಗೆ ಮಾತನಾಡಿದ ಜೋಶಿ, ಡಿಸೆಂಬರ್‌ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಚೀನಾ ವಿದ್ಯಮಾನಗಳನ್ನು ನಮ್ಮ ಗಮನಕ್ಕೆ ತಂದಿದ್ದರು. ಅಧಿಕಾರಿಗಳ ತಂಡ ರಚಿಸಿ ಆರೋಗ್ಯ ಮಂತ್ರಿಗಳ ನೇತೃತ್ವದಲ್ಲಿ ಸಮಿತಿ ಮಾಡಿದ್ದರು. ಸ್ವತಃ ಪ್ರಧಾನಿಗಳೇ ಕೊರೊನಾ ನಿಯಂತ್ರಣದ ಬಗ್ಗೆ ನಿಗಾ ವಹಿಸಿದ್ದಾರೆ. ಪ್ರಸ್ತುತ ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.
ಜಗತ್ತಿನ ಬೇರೆ ದೇಶಗಳಿಗೆ ಹೋಲಿಸಿದರೆ ಸಮರ್ಥವಾಗಿ ನಿಭಾಯಿಸುವಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ನಮ್ಮ ಜನಸಂಖ್ಯೆಗೆ ಹೋಲಿಸಿದರೆ ಕೊರೋನಾ ಬಹಳ ನಿಯಂತ್ರಣದಲ್ಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ