*ಜಮೀನಿನಲ್ಲಿ ಮಡದಿಯನ್ನು ಕೊಂದ ಗಂಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಪತ್ನಿಯ ಮೇಲೆ ಸಂಶಯಪಟ್ಟು ಮಾನಸಿಕ ಕಿರುಕುಳ ನೀಡುತ್ತಿದ್ದ ಪತಿಯೇ, ಆಕೆಯ ತಲೆಗೆ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಬಾಗ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.
ರಾಯಬಾಗ ತಾಲೂಕಿನ ಮಾಡಲಗಿ (ಮಾರಡಿ) ಗ್ರಾಮದ ಕಲ್ಲವ್ವ ಸದಾಶಿವ ಮರಡಿ ಮೃತಪಟ್ಟ ಮಹಿಳೆ. ಅವರ ಪತಿ ಸದಾಶಿವ ರಾಮಾ ಅಲಿಯಾಸ್ ರಾಮಪ್ಪ ಮರಡಿ (67) ಬಂಧಿತ ಆರೋಪಿ.
ಪೊಲೀಸ್ ದೂರಿನ ಪ್ರಕಾರ, ಕಳೆದ ಆರು ತಿಂಗಳಿಂದ ಸದಾಶಿವ ಪತ್ನಿ ಕಲ್ಲವ್ವಳ ಮೇಲೆ ಸಂಶಯಪಡುತ್ತಿದ್ದು, ಇದೇ ವಿಚಾರವಾಗಿ ಆಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಅಕ್ಟೋಬರ್ 1ರಂದು ಸಂಜೆ ಸುಮಾರು 5 ಗಂಟೆಗೆ ಕಲ್ಲವ್ವ ಅವರು ಗ್ರಾಮದ ಸರ್ವೆ ನಂ.65ರ ಜಮೀನಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಅವರ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ತಲೆಗೆ ಗಂಭೀರವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 350/2026ರಂತೆ ಬಿಎನ್‌ಎಸ್-2023ರ ಕಲಂ 85 ಹಾಗೂ 103(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.
ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ ಹಾಗೂ ಅಥಣಿ ಉಪವಿಭಾಗದ ಡಿವೈಎಸ್‌ಪಿ ಪ್ರಶಾಂತ ಜಿ. ಮುನ್ನೋಳಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿ ಸದಾಶಿವ ರಾಮಾ ಅಲಿಯಾಸ್ ರಾಮಪ್ಪ ಮರಡಿಯನ್ನು ಬಂಧಿಸಿದ್ದಾರೆ.
ರಾಯಬಾಗ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ.ಎಂ. ಡಪ್ಪಿನ, ಪಿಎಸ್‌ಐ ನಂದೀಶ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪತ್ನಿಯ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತನ ವಿರುದ್ಧ ಪೊಲೀಸರು ಕಾನೂನು ಕ್ರಮ ಮುಂದುವರಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




