*ಅಕ್ರಮ ಸಂಬಂಧದ ಅನುಮಾನಕ್ಕೆ ಪತ್ನಿಯನ್ನೇ ಕೊಂದ ಪತಿ*: *9 ದಿನಗಳ ಬಳಿಕ ಪ್ರಕರಣ ಬಯಲು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಮಾಗಡಿ ರಸ್ತೆ ವ್ಯಾಪ್ತಿಯ ರಾಜಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿ ರುಕ್ಸಾನಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ಮೊಹಮ್ಮದ್ ಇರ್ಫಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ 25 ವರ್ಷದ ರುಕ್ಸಾನಾ ಕೊಲೆಯಾದ ಮಹಿಳೆ. ಅಕ್ಟೋಬರ್ 13ರಂದು ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಬಳಿಕ ಹಲವು ತಂಡಗಳನ್ನು ರಚಿಸಿ ತನಿಖೆ ನಡೆಸಿದಾಗ ಕೊಲೆಯ ಹಿಂದಿನ ರಹಸ್ಯ ಬಯಲಾಗಿದೆ.
ರುಕ್ಸಾನಾ ಮತ್ತು ಮೊಹಮ್ಮದ್ ಇರ್ಫಾಜ್ ಸುಮಾರು ಒಂದು ವರ್ಷದ ಹಿಂದೆ ವಿವಾಹವಾಗಿದ್ದರು. ಆರು ತಿಂಗಳ ಹಿಂದೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ದಂಪತಿ, ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ರುಕ್ಸಾನಾ ಆಗಾಗ ಫೋನ್ನಲ್ಲಿ ಮಾತನಾಡುತ್ತಿದ್ದುದನ್ನು ಕಂಡು ಪತಿ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಅಕ್ಟೋಬರ್ 10ರಂದು ದಂಪತಿ ನಡುವೆ ಜಗಳ ತೀವ್ರಗೊಂಡಿತ್ತು. ಈ ವೇಳೆ ಇರ್ಫಾಜ್ ಕಲ್ಲಿನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ಚೀಲದಲ್ಲಿ ಇರಿಸಿ, ಬೈಕ್ ಬಳಸಿ ಸಾಗಿಸಿ ರಾಜಕಾಲುವೆಗೆ ಎಸೆದಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮೃತದೇಹ ಪತ್ತೆಯಾದ ಬಳಿಕ ಮಾಗಡಿ ರಸ್ತೆ ಪೊಲೀಸರು ಹತ್ತಕ್ಕೂ ಹೆಚ್ಚು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದರು. ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಾಗ ಗೋಪಾಲಪುರದಲ್ಲಿ ಮಹಿಳೆಯೊಬ್ಬರು ಕಾಣೆಯಾಗಿರುವ ಸುಳಿವು ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಇರ್ಫಾಜ್ನನ್ನು ವಿಚಾರಣೆ ನಡೆಸಿದಾಗ, ಪತ್ನಿ ಬಿಹಾರಕ್ಕೆ ಹೋಗಿದ್ದಾಳೆ ಎಂದು ಆತ ಹೇಳಿದ್ದ. ಆದರೆ, ಆತನ ಹೇಳಿಕೆಗಳ ಬಗ್ಗೆ ಅನುಮಾನಗೊಂಡ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸಿದಾಗ ಕೊಲೆಯ ಸುಳಿವು ಲಭಿಸಿದೆ ಎಂದು ತಿಳಿದುಬಂದಿದೆ.
ಸದ್ಯ ಮೊಹಮ್ಮದ್ ಇರ್ಫಾಜ್ನನ್ನು ಬಂಧಿಸಿರುವ ಪೊಲೀಸರು, ಕೊಲೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಅನುಮಾನ ಮತ್ತು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿನ ಈ ಘಟನೆ ಬೆಂಗಳೂರಿನಲ್ಲಿ ಆತಂಕ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




