*ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದೇನೆ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾನು ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ. ಅವರು ಸಮಯ ಕೊಟ್ಟರೆ ದೆಹಲಿಗೆ ಭೇಟಿ ನೀಡುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಹಾಗೂ ನೀರಾವರಿ ಯೋಜನೆಗಳ ಜಾರಿ ಸಂಬಂಧ ಕೇಂದ್ರ ಸಚಿವರ ಭೇಟಿ ಬಗ್ಗೆ ಕೇಳಿದಾಗ, ಈ ರೀತಿ ಉತ್ತರಿಸಿದರು.
ರಾಜ್ಯದ ಸಂಸದರು ರಾಜ್ಯದ ಹಿತಕ್ಕೆ ಧ್ವನಿ ಎತ್ತಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ ಸಂಸದರು ರಾಜ್ಯದ ಹಿತಕ್ಕಾಗಿ ಹೋರಾಟ ನಡೆಸಬೇಕಿದೆ. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಅವರು ರಾಜ್ಯಕ್ಕೆ ಸಹಕಾರ ನೀಡಬೇಕು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನಿಯೋಗವನ್ನು ಕರೆದೊಯ್ಯುವುದಾಗಿ ಹೇಳಿದ್ದಾರೆ. ಈ ಬಗ್ಗೆ ನಾಳೆ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಲಾಗುವುದು. ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಮುನ್ನ ಒಮ್ಮೆ ದೆಹಲಿಗೆ ಹೋಗಿ ಬರಬೇಕಾಗಿದೆ. ದೆಹಲಿಗೆ ಬನ್ನಿ ನಾವು ಸಹಾಯ ಮಾಡುತ್ತೇವೆ ಎಂದು ಅವರು ಹೇಳುತ್ತಿದ್ದಾರೆ. ಅವರಿಗೆ ಜವಾಬ್ದಾರಿ ಕೊಟ್ಟು ನೋಡೋಣ.
ರಾಜ್ಯದಲ್ಲಿ ಆಡಳಿತ ಕುಸಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಚಿಂತಿಸುವ ಅಗತ್ಯವಿಲ್ಲ. ಆಡಳಿತ ಸರಿಯಾಗಿ ನಡೆಯುತ್ತಿದೆ” ಎಂದು ತಿಳಿಸಿದರು.




