*ಚಿಕ್ಕೋಡಿಯಲ್ಲಿ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ ಪಡೆ*
![](https://pragativahini.com/wp-content/uploads/2024/08/IMG_20240819_170709_650_x_350_pixel.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಮೂಲಕ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಸದೆ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಪಾಲರ ನಡೆ ಮತ್ತು ಬಿಜೆಪಿ ಪಕ್ಷದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪಟ್ಟಣದ ಸಂಸದರ ಕಚೇರಿಯಿಂದ ಬಸವ ವೃತ್ತದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಇದೇ ಸಂದರ್ಭದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ಸಂದರ್ಭದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ರಾಜ್ಯಪಾಲರು ತಕ್ಷಣ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಷಿಕ್ಯೂಷನ್ ಆದೇಶ ವಾಪಸ್ ಪಡೆಯಬೇಕು. ಸಿಎಂ ಸಿದ್ದರಾಮಯ್ಯ ವಿರುದ್ಧ ಬೇಸ್ ಲೆಸ್ ಆರೋಪ ಹಾಕಲಾಗಿದೆ. ರಾಜ್ಯದಲ್ಲಿ ಸರಕಾರವನ್ನು ಅಭದ್ರಗೊಳಿಸಿವ ಕಾರ್ಯ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದವರು ಎಲ್ಲರೂ ಒಗ್ಗಟ್ಟಾಗಿ ರಾಜ್ಯಪಾಲರ ನಡೆಯನ್ನು ವಿರೋಧ ಮಾಡುತ್ತೇವೆ. ಸಂವಿಧಾನದ ವಿರೋಧವಾಗಿ ಕೇಂದ್ರ ಬಿಜೆಪಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಈ ಕುರಿತು ಸಂಸತ್ತನಲ್ಲೂ ಧ್ವನಿ ಎತ್ತುತ್ತೇವೆ ಎಂದರು.
ಸಾಮಾಜಿಕ ನ್ಯಾಯ ಎತ್ತಿ ಹಿಡಿದು ಜನಪರ ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಖಾಸಗಿ ದೂರು ಆಧರಿಸಿ ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ನಿರ್ಣಯ ಚುನಾಯಿತ ಸರ್ಕಾರ ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ. ನಮ್ಮ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ. ಅದರ ಫಲವೆಂಬಂತೆ ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಕಾಕಾ ಸಾಬೇಬ್ ಪಾಟೀಲ್, ಯುವ ನಾಯಕ ರಾಹುಲ್ ಜಾರಕಿಹೊಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಅಣ್ಣಾಸಾಹೇಬ ಹವಲೆ, ಅರ್ಜುನ್ ನಾಯಕವಾಡಿ, ಕಾಂಗ್ರೆಸ್ ಮುಖಂಡರಾದ ಸಿದ್ದಿಕ ಅಂಕಲಗಿ, ಕಿರಣ ರಜಪೂತ, ಸುನೀಲ್ ಸಂಕ, ರಮೇಶ ಸಿಂದಗಿ, ಪ್ರಭಾಕರ್ ಕೋರೆ, ಸಾಬೀರ ಜಮಾದಾರ,ಗುಲಾಬ ಹುಸೇನ್ ಬಾಗವಾನ, ಎಚ್.ಎಸ್. ನಸಲಾಪೂರೆ ಸೇರಿದಂತೆ ಸಾವಿರಾರು ಮುಖಂಡರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ