*ಭಾರಿ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜು.18 ರಂದು ಗುರುವಾರ ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡದ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಸೇರಿ ಒಟ್ಟು 5 ತಾಲೂಕು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ತಾಲೂಕಿನಲ್ಲಿ ನಾಳೆ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹೊಸನಗರ, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 18ರಂದು (ಗುರುವಾರ) ಅಂಗನವಾಡಿಯಿಂದ ಪಿಯುಸಿ ವರೆಗೆ ಈ ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಗುರುವಾರ (ಜುಲೈ 18 ರಂದು) ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹವಾಮಾನ ಸ್ಥಿತಿಯ ಪ್ರಕಾರ ಪೂರ್ವ ಅರಬ್ಬೀ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಉದ್ದಕ್ಕೂ (ಟ್ರಫ್) ದಟ್ಟ ಮೋಡ ಇರುವ ಕಾರಣ ಮಳೆಯಾಗುತ್ತಿದೆ.
ಜುಲೈ 19 ರಂದು ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಆಗುವ ಹೆಚ್ಚಿನ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 21 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಹಾಗೂ ಅತಿಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ
ಬೆಳಗಾವಿ ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಜುಲೈ 20 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ
ಭಾರೀ ಗಾಳಿಯ ಎಚ್ಚರಿಕೆ
ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ಭಾಗದಲ್ಲಿ ಭಾರೀ ಗಾಳಿ, ಮಳೆಯ ಒತ್ತಡ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ